ನವದೆಹಲಿ: ಬಿಜೆಪಿ ನೇತೃತ್ವದ ಎನ್ ಡಿಎ ಸರ್ಕಾರಕ್ಕೆ ಮತ್ತೊಂದು ಹಿನ್ನಡೆಯಾಗಿದ್ದು, ಕೇಂದ್ರದ ವಿರುದ್ಧ ತೆಲುಗು ದೇಶಂ ಪಾರ್ಟಿ(ಟಿಡಿಪಿ) ಲೋಕಸಭೆಯಲ್ಲಿ ಮಂಡಿಸುತ್ತಿರುವ ಅವಿಶ್ವಾಸ ನಿರ್ಣಯಕ್ಕೆ ಕಾಂಗ್ರೆಸ್, ಸಿಪಿಎಂ, ವೈಎಸ್ ಆರ್ ಕಾಂಗ್ರೆಸ್, ತೃಣಮೂಲ ಕಾಂಗ್ರೆಸ್, ಟಿಆರ್ ಎಸ್, ಎಐಎಂಐಎಂ ಮತ್ತು ಆಮ್ ಆದ್ಮಿ ಪಕ್ಷ ಸೇರಿದಂತೆ ಒಟ್ಟು 8 ರಾಜಕೀಯ ಪಕ್ಷಗಳು ಬೆಂಬಲ ಘೋಷಿಸಿವೆ. ಅಲ್ಲದೆ ಬಿಜೆಪಿ ಮಿತ್ರ ಪಕ್ಷ ಶಿವಸೇನೆ ಸಹ ಅವಿಶ್ವಾಸ ನಿರ್ಣಯವನ್ನು ಬೆಂಬಲಿಸುವ ಸಾಧ್ಯತೆ ಇದೆ ಎನ್ನಲಾಗಿದೆ.
ಆಂಧ್ರ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡಲಿಲ್ಲ ಎಂಬ ಕಾರಣಕ್ಕೆ ಎನ್ ಡಿಎ ಮೈತ್ರಿಕೂಟದಿಂದ ಹೊರಬರುವುದಾಗಿ ಘೋಷಿಸಿದ ಬೆನ್ನಲ್ಲೇ ಟಿಡಿಪಿ ಕೇಂದ್ರ ಸರ್ಕಾರದ ವಿರುದ್ಧ ಇಂದು ಲೋಕಸಭೆಯಲ್ಲಿ ಅವಿಶ್ವಾಸ ನಿರ್ಣಯ ಮಂಡಿಸಲು ಮುಂದಾಗಿತ್ತು. ಆದರೆ ಸ್ಪೀಕರ್ ಸುಮಿತ್ರಾ ಮಹಾಜನ್ ಅವರು ಕಲಾಪವನ್ನು ಸೋಮವಾರಕ್ಕೆ ಮುಂದೂಡಿದ್ದಾರೆ.
ಟಿಡಿಪಿ-ವೈಎಸ್ಆರ್ ಕಾಂಗ್ರೆಸ್ ಈಗ ಸೋಮವಾರ ಅವಿಶ್ವಾಸ ನಿರ್ಣಯ ಮಂಡಿಸಲು ನಿರ್ಧರಿಸಿದ್ದು, ಇದಕ್ಕೆ ಹಲವು ಪ್ರತಿಪಕ್ಷಗಳು ಬೆಂಬಲ ನೀಡಿವೆ. ಅವಿಶ್ವಾಸ ನಿರ್ಣಯಕ್ಕೆ ಕನಿಷ್ಠ 50 ಸಂಸದರ ಬೆಂಬಲ ಅಗತ್ಯವಿದ್ಧು, ಕಾಂಗ್ರೆಸ್ 48, ಟಿಡಿಪಿ 16, ವೈಎಸ್ ಆರ್ ಕಾಂಗ್ರೆಸ್ ಮತ್ತು ಸಿಪಿಎಂ ತಲಾ 9 ಸಂಸದರು ಹೊಂದಿವೆ.
ಬಿಜೆಪಿ ಸಂಪೂರ್ಣ ಬಹುಮತ ಹೊಂದಿರುವುದರಿಂದ ಲೋಕಸಭೆಯಲ್ಲಿ ಅವಿಶ್ವಾಸ ನಿರ್ಣಯ ಪಾಸ್ ಆಗುವುದು ಕಷ್ಟ. ಆದರೆ ಪ್ರತಿಪಕ್ಷಗಳ ಒಗ್ಗಟ್ಟಾಗುವ ಮೂಲಕ ಸರ್ಕಾರಕ್ಕೆ ಬಿಸಿ ಮುಟ್ಟಿಸದಂತಾಗುತ್ತದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics