ಮಥುರಾ: ಮಥುರಾ ಬಳಿಯಿರುವ ಯಮುನಾ ಎಕ್ಸ್‌ಪ್ರೆಸ್ ವೇನಲ್ಲಿ ಭಾನುವಾರ ಮುಂಜಾನೆ ಸಂಭವಿಸಿದ ಭೀಕರ ಅಪಘಾತದಲ್ಲಿ ದೆಹಲಿ ಏಮ್ಸ್ ಆಸ್ಪತ್ರೆ ಮೂವರು ವೈದ್ಯರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಭಾನುವಾರ ಬೆಳಗ್ಗೆ ಸುಮಾರು 2 ಗಂಟೆ ಸುಮಾರಿನಲ್ಲಿ ವೈದ್ಯರು ಸಂಚರಿಸುತ್ತಿದ್ದ ಇನ್ನೋವಾ ಕಾರು ಕಂಟೇನರ್‌ಗೆ ಢಿಕ್ಕಿಯಾದ ಪರಿಣಾಮ ಸ್ಥಳದಲ್ಲೇ ಮೂವರು ಏಮ್ಸ್ ವೈದ್ಯರು ದಾರುಣವಾಗಿ ಸಾವನ್ನಪ್ಪಿದ್ದಾರೆ. ಮೂಲಗಳ ಪ್ರಕಾರ ದೆಹಲಿಯಿಂದ ಆಗ್ರಾಕ್ಕೆ ವೈದ್ಯರು ಸಹೋದ್ಯೋಗಿಯೋರ್ವರ ಜನ್ಮ ದಿನದ ಸಂಭ್ರಮಾಚರಣೆಗೆ ತೆರಳುತ್ತಿದ್ದ ವೇಳೆ ಅವಘಡ ಸಂಭವಿಸಿದ್ದು ಕಾರಿನಲ್ಲಿದ್ದ ನಾಲ್ಕು ವೈದ್ಯರು ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಾರು ಅತೀ ವೇಗದಲ್ಲಿ ಚಲಾಯಿಸುತ್ತಿದ್ದುದೇ ಅವಘಡಕ್ಕೆ ಕಾರಣ ಎಂದು ಹೇಳಲಾಗುತ್ತಿದ್ದು, ಘಟನೆಯಲ್ಲಿ ಗಾಯಗೊಂಡ ಇತರೆ ಗಾಯಾಳುಗಳ ಸ್ಥಿತಿಯೂ ಚಿಂತಾಜನಕವಾಗಿದೆ ಎಂದು ವರದಿಯಾಗಿದೆ.
ಪ್ರಸ್ತುತ ಪ್ರಕರಣ ದಾಖಲಿಸಿಕೊಂಡಿರುವ ಸ್ಥಳೀಯ ಪೊಲೀಸರು ತನಿಖೆ ನಡೆಸುತ್ತಿದ್ದು, ಅಪಘಾತಕ್ಕೀಡಾದ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.