ಮಧುರೈ: ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಕಾವೇರಿ ನಿರ್ವಹಣಾ ಮಂಡಳಿ ರಚನೆ ಮಾಡುವಲ್ಲಿ ವಿಫಲವಾಗಿರುವ ಕೇಂದ್ರ ಸರ್ಕಾರದ ವಿರುದ್ಧ ತಮಿಳುನಾಡು ಸರ್ಕಾರ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಕಾವೇರಿ ನಿರ್ವಹಣಾ ಮಂಡಳಿ ರಚನೆಗೆ ಒತ್ತಾಯಿಸಿ ಆಡಳಿತರೂಢ ಎಐಎಡಿಎಂಕೆ ಏಪ್ರಿಲೆ 2ರಂದು ಉಪವಾಸ ಸತ್ಯಾಗ್ರಹ ನಡೆಸಲು ನಿರ್ಧರಿಸಿದೆ. ಅಲ್ಲದೆ ತಮಿಳುನಾಡು ಮುಖ್ಯಮಂತ್ರಿ ಕೆ ಪಳನಿಸ್ವಾಮಿ ಅವರು ಕೇಂದ್ರ ಸರ್ಕಾರದ ವಿರುದ್ಧ ಸುಪ್ರೀಂ ಕೋರ್ಟ್ ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸುವ ಸುಳಿವು ನೀಡಿದ್ದಾರೆ.
ವರದಿಗಳ ಪ್ರಕಾರ, ತಮಿಳುನಾಡು ಸರ್ಕಾರ ನಾಳೆ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಲಿದೆ.
ಕಾವೇರಿ ನಿರ್ವಹಣಾ ಮಂಡಳಿ ರಚನೆಗೆ ಒತ್ತಾಯಿಸಿ ಎಐಎಡಿಎಂಕೆ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಏಪ್ರಿಲ್ 2ರಂದು ಒಂದು ದಿನ ಉಪವಾಸ ಸತ್ಯಾಗ್ರಹ ನಡಸಲಿದೆ ಎಂದು ಉಪ ಮುಖ್ಯಮಂತ್ರಿ ಹಾಗೂ ಎಐಎಡಿಎಂಕೆ ಸಂಚಾಲಕ ಒ ಪನ್ನೀರ್ ಸೇಲ್ವಂ ಅವರು ಹೇಳಿದ್ದಾರೆ.
ಈ ಮಧ್ಯೆ ಪ್ರತಿಪಕ್ಷ ಡಿಎಂಕೆ, ಮುಖ್ಯಮಂತ್ರಿ ಪಳನಿಸ್ವಾಮಿ ಅವರು ಸಂಪುಟ ಸಭೆ ಕರೆದು ಕೇಂದ್ರ ಸರ್ಕಾರ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಖಂಡನಾ ನಿರ್ಣಯ ಪಾಸ್ ಮಾಡುವಂತೆ ಒತ್ತಾಯಿಸಿದೆ.
ಪಕ್ಷದ ಕಾರ್ಯಕಾರಣಿ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಡಿಎಂಕೆ ನಾಯಕ ಎಂಕೆ ಸ್ಟಾಲಿನ್ ಅವರು, ರಾಜ್ಯ ಸರ್ಕಾರ ಈ ಕೂಡಲೇ ಕೇಂದ್ರದ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಬೇಕು ಎಂದು ಆಗ್ರಹಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics