ನವದೆಹಲಿ: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪರ ಜನಾರ್ದನ ರೆಡ್ಡಿ ಪ್ರಚಾರ ಮಾಡುವ ವಿಷಯದಲ್ಲಿ ಸಾಕಷ್ಟು ಗೊಂದಲಗಳುಂಟಾಗಿದ್ದು, ರೆಡ್ಡಿ ಸಹೋದರರನ್ನು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ರಕ್ಷಿಸುತ್ತಿದೆ ಎಂದು ಕಾಂಗ್ರೆಸ್ ಗಂಭೀರ ಆರೋಪ ಮಾಡಿದೆ.
ಅಕ್ರಮ ಗಣಿಗಾರಿಕೆ ಪ್ರಕರಣಗಳಲ್ಲಿ ಸಿಬಿಐ ರೆಡ್ಡಿ ಸಹೋದರರಿಗೆ ಕ್ಲೀನ್ ಚಿಟ್ ನೀಡಿದೆ. ಇದಾದ ಬಳಿಕ ಭ್ರಷ್ಟಾಚಾರದ ಆರೋಪ ಎದುರಿಸುತ್ತಿರುವ ಬಿಎಸ್ ಯಡಿಯೂರಪ್ಪನವರನ್ನು ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಿಸಲಾಗಿದ್ದು, ಇದು ನ್ಯಾಯಾಂಗವನ್ನು ಮೂದಲಿಕೆ ಮಾಡಿದಂತಿದೆ ಎಂದು ಕಾಂಗ್ರೆಸ್ ನಾಯಕ ರಾಜೀವ್ ಶುಕ್ಲ ಹೇಳಿದ್ದಾರೆ.
ಕಾಂಗ್ರೆಸ್ ಪಕ್ಷ ಅಕ್ರಮ ಗಣಿಗಾರಿಕೆ ಮಾಡಿದ್ದ ರೆಡ್ದಿ ಸಹೋದರರ ವಿರುದ್ಧ ಹೋರಾಟ ನಡೆಸಿತ್ತು, ಆದರೆ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಇಂದು ಅದೇ ರೆಡ್ಡಿ ಸಹೋದರರನ್ನು ರಕ್ಷಿಸುತ್ತಿದೆ ಎಂದು ಕಾಂಗ್ರೆಸ್ ನಾಯಕ ರಾಜೀವ್ ಶುಕ್ಲ ಆರೋಪಿಸಿದ್ದಾರೆ.