ಲಖನೌ: ದೇಶದಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ರಚಿಸಿರುವ ಸಂವಿಧಾನ ನಾಶಕ್ಕೆ ಬಹುದೊಡ್ಡ ಷಡ್ಯಂತ್ರ ನಡೆಯುತ್ತಿದೆ ಎಂದು ಬಹುಜನ ಸಮಾಜವಾದಿ ಪಕ್ಷದ ಮುಖ್ಯಸ್ಥೆ ಮಾಯಾವತಿ ಹೇಳಿದ್ದಾರೆ.
ಕರ್ನಾಟಕದಲ್ಲಿ ಅಲ್ಪಮತದ ಹೊರತಾಗಿಯೂ ಬಿಜೆಪಿಯ ಬಿಎಸ್ ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಹಿನ್ನಲೆಯಲ್ಲಿ ಉತ್ತರ ಪ್ರದೇಶದ ಲಖನೌನಲ್ಲಿ ಮಾತನಾಡಿದ ಅವರು, ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಾಗಿನಿಂದಲೂ ಬಾಬಾ ಸಾಹೇಬ್ ಅಂಬೇಡ್ಕರ್ ರಚಿಸಿರುವ ಸಂವಿಧಾನ ನಾಶಕ್ಕೆ ನಿರಂತರ ಷಡ್ಯಂತ್ರ ನಡೆಯುತ್ತಿದೆ. ಇದಕ್ಕೆ ಕರ್ನಾಟಕದ ಹಾಲಿ ರಾಜಕೀಯ ಪರಿಸ್ಥಿತಿ ಸೂಕ್ತ ಉದಾಹರಣೆಯಾಗಿದೆ ಎಂದು ಮಾಯಾವತಿ ಟೀಕಿಸಿದ್ದಾರೆ.
'ಬಾಬಾ ಸಾಹೇಬ್ ಅಂಬೇಡ್ಕರ್ ಅವರು ರಚಿಸಿದ ಸಂವಿಧಾನವನ್ನು ನಾಶ ಮಾಡುವ ಪಿತೂರಿ ಇದಾಗಿದ್ದು, ಬಿಜೆಪಿಯವರು ಅಧಿಕಾರಕ್ಕೆ ಬಂದಾಗಿನಿಂದಲೂ ಪ್ರಜಾಪ್ರಭುತ್ವದ ಅಂಗಸಂಸ್ಥೆಗಳನ್ನು ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ. ಈ ಮೂಲಕ ಸಂವಿಧಾನವನ್ನು ನಾಶ ಮಾಡಲು ಪಿತೂರಿ ನಡೆಸುತ್ತಿದ್ದಾರೆ. ಆ ಮೂಲಕ ಪ್ರಜಾಪ್ರಭುತ್ವದ ಮೂಲ ಆಶಯಕ್ಕೆ ಕೊಡಲಿ ಪೆಟ್ಟು ನೀಡುತ್ತಿದ್ದಾರೆ' ಎಂದು ಮಾಯಾವತಿ ಬಿಜೆಪಿ ಮತ್ತು ಪ್ರಧಾನಿ ಮೋದಿ ಅವರನ್ನು ಟೀಕಿಸಿದ್ದಾರೆ.
ಮೇ 15 ರಂದು ಹೊರಬಿದ್ದ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 104 ಸ್ಥಾನ, ಕಾಂಗ್ರೆಸ್ 78 ಸ್ಥಾನ, ಜೆಡಿಎಸ್ 38 ಸ್ಥಾನ ಮತ್ತು ಇತರರು 2 ಸ್ಥಾನ ಗೆದ್ದಿದ್ದರು. ಅತೀ ದೊಡ್ಡಪಕ್ಷವಾಗಿ ಹೊರಹೊಮ್ಮಿದ ಬಿಜೆಪಿ, ಶಾಸಕಾಂಗ ಪಕ್ಷದ ನಾಯಕರನ್ನಾಗಿ ಯಡಿಯೂರಪ್ಪ ಅವರನ್ನು ಆರಿಸಿತ್ತು. ರಾಜ್ಯಪಾಲರು ಸರ್ಕಾರ ರಚನೆಗೆ ಬಿಜೆಪಿಗೆ ಅವಕಾಶ ನೀಡಿದ್ದರಿಂದ ರಾಜ್ಯದ 24ನೇ ಮುಖ್ಯಮಂತ್ರಿಯಾಗಿ ಯಡಿಯೂರಪ್ಪ ಇಂದು ರಾಜಭವನದಲ್ಲಿ ಪ್ರಮಾಣವಚನ ಸ್ವೀಕರಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics