ನವದೆಹಲಿ: ಕರ್ನಾಟಕದಲ್ಲಿ ಜನಾದೇಶಕ್ಕೆ ವಿರುದ್ಧವಾಗಿ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡಿವೆ ಎಂದು ಬಿಜೆಪಿ ರಾಷ್ಠ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಸೋಮವಾರ ಹೇಳಿದ್ದಾರೆ.
ಇಂದು ದೆಹಲಿಯಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅಮಿತ್ ಶಾ, ಕಾಂಗ್ರೆಸ್ ಚುನಾವಣೆಯಲ್ಲಿ ದೊಡ್ಡ ಮಟ್ಟದ ಹಣ ಹಂಚಿಕೆಗೆ ಯತ್ನಿಸಿತು. ನಕಲಿ ವೋಟರ್ ಐಡಿ ಕಾರ್ಡ್ ಗಳನ್ನು ಜಪ್ತಿ ಮಾಡಲಾಗಿದೆ. ಇಷ್ಟೇಲ್ಲಾ ಮಾಡಿದರೂ ಜನಾದೇಶ ಬಿಜೆಪಿ ಪರವಾಗಿ ಬಂದಿದೆ. ಜನಾದೇಶಕ್ಕೆ ವಿರುದ್ಧವಾಗಿ ಕಾಂಗ್ರೆಸ್, ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡಿದೆ ಎಂದು ವಾಗ್ದಾಳಿ ನಡೆಸಿದರು.
ಸ್ಪಷ್ಟ ಬಹುಮತ ಇಲ್ಲದಿದ್ದರೂ ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ರಚಿಸಿದ್ದನ್ನು ಸಮರ್ಥಿಸಿಕೊಂಡ ಅಮಿತ್ ಶಾ, ಅತಿ ದೊಡ್ಡ ಪಕ್ಷವಾಗಿ ಸರ್ಕಾರ ರಚಿಸಿದ್ದು ತಪ್ಪಾ? ಎಂದು ಪ್ರಶ್ನಿಸಿದರು.
ಇದೇ ವೇಳೆ ಮಣಿಪುರ ಮತ್ತು ಗೋವಾದಲ್ಲಿ ಅತಿದೊಡ್ಡ ಪಕ್ಷವಾದ ಕಾಂಗ್ರೆಸ್ ಗೆ ಏಕೆ ಸರ್ಕಾರ ರಚಿಸಲು ಆಹ್ವಾನ ನೀಡಲಿಲ್ಲ ಎಂಬ ವರದಿಗಾರರ ಪ್ರಶ್ನೆಗೆ ಉತ್ತರಿಸಿದ ಶಾ, ಮಣಿಪುರ ಮತ್ತು ಗೋವಾದಲ್ಲಿ ಕಾಂಗ್ರೆಸ್ ದೊಡ್ಡ ಪಕ್ಷವಾಗಿದ್ದರೂ ಸರ್ಕಾರ ರಚನೆಯೆ ಹಕ್ಕು ಮಂಡಿಸಲಿಲ್ಲ. ಎರಡೂ ರಾಜ್ಯಗಳಲ್ಲಿ ಬಿಜೆಪಿ ಮೊದಲು ಸರ್ಕಾರ ರಚನೆಯ ಹಕ್ಕು ಮಂಡಿಸಿತ್ತು ಎಂದರು.
ಇನ್ನು ಬಿಎಸ್ ಯಡಿಯೂರಪ್ಪ ಅವರು ಬಹುಮತ ಸಾಬೀತಪಡಿಸಲು ರಾಜ್ಯಪಾಲರಿಗೆ ಒಂದು ವಾರ ಕಾಲಾವಕಾಶ ಕೇಳಿದ್ದರು ಎಂಬುದು ಸುಳ್ಳು. ಕಾಂಗ್ರೆಸ್ ಸುಪ್ರೀಂ ಕೋರ್ಟ್ ಗೆ ಸುಳ್ಳು ಹೇಳಿದೆ ಎಂದು ಅಮಿತ್ ಶಾ ಹೇಳಿದ್ದಾರೆ.