ರಾಹುಲ್, ಸೋನಿಯಾ ಭೇಟಿ ಮಾಡಿದ ಎಚ್ ಡಿಕೆ
ನವದೆಹಲಿ: ಹಳೆಯ ವಿಚಾರಗಳನ್ನು ಮರೆತು ಉತ್ತಮ ಆಡಳಿತ ನೀಡುವತ್ತ ಮುನ್ನಡೆಯೋಣ ಎಂದು ಕಾಂಗ್ರೆಸ್ ಪಕ್ಷದ ವರಿಷ್ಟರು ಕರ್ನಾಟಕದ ನಿಯೋಜಿತ ಸಿಎಂ ಎಚ್ ಡಿ ಕುಮಾರಸ್ವಾಮಿ ಅವರಿಗೆ ಹೇಳಿದ್ದಾರೆ.
ನಿನ್ನೆ ದೆಹಲಿಯಲ್ಲಿ ಕಾಂಗ್ರೆಸ್ ಅಧಿನಾಯಕಿ ಸೋನಿಯಾಗಾಂಧಿ, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಎಚ್ ಡಿ ಕುಮಾರ ಸ್ವಾಮಿ ಅವರು ಭೇಟಿ ಮಾಡಿದರು. ಈ ವೇಳೆ ಹಲವು ವಿಚಾರಗಳ ಕುರಿತು ಚರ್ಚೆ ನಡೆಸಿದ ಉಭಯ ನಾಯಕರು ಸಂಪುಟ ರಚನೆ ಕುರಿತು ಚರ್ಚೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಕೇವಲ ಕರ್ನಾಟಕ ಮಾತ್ರವಲ್ಲದೇ ಮುಂಬರವು ಲೋಕಸಭಾ ಚುನಾವಣೆಗೂ ಕಾಂಗ್ರೆಸ್ ರಣತಂತ್ರ ರೂಪಿಸುತ್ತಿದ್ದು, ಈ ನಿಟ್ಟಿನಲ್ಲಿ ಕುಮಾರಸ್ವಾಮಿ ಅವರೊಂದಿಗೆ ಸೋನಿಯಾ ಮತ್ತು ರಾಹುಲ್ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.
ಇನ್ನು ಭೇಟಿ ವೇಳೆ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್ ಅವರೂ ಕೂಡ ಇದ್ದರು. ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ನಾಳೆ ಎಚ್ ಡಿ ಕುಮಾರಸ್ವಾಮಿ ಪ್ರಮಾಣ ವಚನ ಸ್ವೀಕಾರ ಪಡೆಯಲಿದ್ದಾರೆ. ನಾಳೆ ವಿದಾನಸೌಧದ ಅವರಣದಲ್ಲಿ ಲಕ್ಷಾಂತರ ಅಭಿಮಾನಿಗಳು ಮತ್ತು ವಿವಿಧ ರಾಜಕೀಯ ಪಕ್ಷಗಳ ಗಣ್ಯರ ಸಮ್ಮುಖದಲ್ಲಿ ಎಚ್ ಡಿ ಕುಮಾರಸ್ವಾಮಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ನಾಳೆ ಸಂಜೆ 4 ಗಂಟೆಗೆ ಪ್ರಮಾಣ ವಚನ ಕಾರ್ಯಕ್ರಮ ನಡೆಯಲಿದೆ.