ನವದೆಹಲಿ: ಸಿಬಿಐ ವಿಶೇಷ ನಿರ್ದೇಶಕ ರಾಕೇಶ್ ಅಸ್ತಾನಾ ಅವರ ವಿರುದ್ಧ ದಾಖಲಾಗಿರುವ ಎಫ್ಐಆರ್ ಬಗ್ಗೆ ತನಿಖೆ ನಡೆಸುತ್ತಿರುವ ಸಿಬಿಐ ಅಧಿಕಾರಿಯೊಬ್ಬರು ತಮ್ಮನ್ನು ಮಹಾರಾಷ್ಟ್ರದ ನಾಗ್ಪುರಕ್ಕೆ ವರ್ಗಾಯಿಸಿರುವುದನ್ನು ರದ್ದುಪಡಿಸುವಂತೆ ಕೋರಿ ಸೋಮವಾರ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ.
ಸಿಬಿಐನಲ್ಲಿ ಕೇಳಿಬಂದ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಅಸ್ತಾನಾ ಅವರ ಪಾತ್ರದ ಕುರಿತು ತನಿಖೆ ನಡೆಸುತ್ತಿರುವ ತನಿಖಾ ತಂಡದ ಅಧಿಕಾರಿಯಾಗಿರುವ ಐಪಿಎಸ್ ಅಧಿಕಾರಿ ಮನೀಶ್ ಕುಮಾರ್ ಸಿನ್ಹ ಇಂದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಅವರಿದ್ದ ನ್ಯಾಯಪೀಠಕ್ಕೆ ನಾಳೆಯೇ ತುರ್ತು ವಿಚಾರಣೆ ನಡೆಸುವಂತೆ ಕೋರಿ ಅರ್ಜಿ ಸಲ್ಲಿಸಿದ್ದಾರೆ.
ನ್ಯಾಯಪೀಠದಲ್ಲಿ ನ್ಯಾಯಮೂರ್ತಿಗಳಾದ ಎಸ್ ಕೆ ಕೌಲ್ ಮತ್ತು ಕೆ ಎಂ ಜೋಸೆಫ್ ಕೂಡ ಇದ್ದು ನಾಳೆ ವಿಚಾರಣೆಯನ್ನು ಕೈಗೆತ್ತಿಕೊಳ್ಳಲಿದ್ದಾರೆ. ತಮ್ಮನ್ನು ಕರ್ತವ್ಯದಿಂದ ವಿಮುಕ್ತಿಗೊಳಿಸಿ ರಜೆ ಮೇಲೆ ತೆರಳುವಂತೆ ಮಾಡಿದ ಕೇಂದ್ರ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸಿಬಿಐ ನಿರ್ದೇಶಕ ಅಲೋಕ್ ಕುಮಾರ್ ವರ್ಮಾ ಕೂಡ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ.
ಅಲೋಕ್ ಕುಮಾರ್ ವರ್ಮಾ ಅವರ ಅರ್ಜಿ ವಿಚಾರಣೆ ಜೊತೆಗೆ ಸುಪ್ರೀಂ ಕೋರ್ಟ್ ನ್ಯಾಯಪೀಠ ತಮ್ಮ ಅರ್ಜಿ ವಿಚಾರಣೆಯನ್ನು ಕೂಡ ನಾಳೆ ಕೈಗೆತ್ತಿಕೊಳ್ಳಲಿದೆ ಎಂದು ಸಿನ್ಹಾ ತಿಳಿಸಿದ್ದಾರೆ.
ತಮ್ಮನ್ನು ನಾಗ್ಪುರಕ್ಕೆ ವರ್ಗಾವಣೆ ಮಾಡಿ ಅಸ್ತಾನಾ ವಿರುದ್ಧ ತನಿಖಾ ತಂಡದಿಂದ ಕೂಡ ತಮ್ಮನ್ನು ಕೈಬಿಡಲಾಗಿದೆ ಎಂದು ಸಿನ್ಹಾ ತಮ್ಮ ಅರ್ಜಿಯಲ್ಲಿ ಆರೋಪಿಸಿದ್ದಾರೆ.