ಚಂದ್ರಶೇಖರ್ ರಾವ್ ವಂಶಾಡಳಿತದ ಬಗ್ಗೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಟೀಕೆ
ಯುಪಿಎ ಅಧ್ಯಕ್ಷ್ಯೆ ಸೋನಿಯಾ ಗಾಂಧಿ ಹಾಗೂ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ತೆಲಂಗಾಣ ಸಿಎಂ ಕೆ. ಚಂದ್ರಶೇಖರ್ ರಾವ್ ಅವರ ಬಗ್ಗೆ ಟೀಕಾಪ್ರಹಾರ ನಡೆಸಿದ್ದಾರೆ.
ಹೈದರಾಬಾದ್: ಯುಪಿಎ ಅಧ್ಯಕ್ಷ್ಯೆ ಸೋನಿಯಾ ಗಾಂಧಿ ಹಾಗೂ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ತೆಲಂಗಾಣ ಸಿಎಂ ಕೆ. ಚಂದ್ರಶೇಖರ್ ರಾವ್ ಅವರ ವಂಶಾಡಳಿತದ ಬಗ್ಗೆ ಟೀಕಾಪ್ರಹಾರ ನಡೆಸಿದ್ದಾರೆ.
ತೆಲಂಗಾಣದಲ್ಲಿ ಕುಟುಂಬ ರಾಜಕಾರಣದಲ್ಲಿ ತೊಡಗಿರುವ ಕೆಸಿಆರ್ ಜನತೆಯ ಆಶೋತ್ತರಗಳಿಗೆ ಸ್ಪಂದಿಸುತ್ತಿಲ್ಲ ಎಂದು ಸೋನಿಯಾ ಗಾಂಧಿ ಆರೋಪಿಸಿದ್ದಾರೆ. ತೆಲಂಗಾಣ ರಾಜ್ಯ ರಚನೆಯಾದ ಬಳಿಕ ಇದೇ ಮೊದಲ ಬಾರಿಗೆ ರಾಜ್ಯಕ್ಕೆ ಭೇಟಿ ನೀಡಿರುವ ಸೋನಿಯಾ ಗಾಂಧಿ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷದ ಪರ ಪ್ರಚಾರ ಕೈಗೊಂಡಿದ್ದರು.
ಈಗಾಗಲೇ ಮಹಾ ಮೈತ್ರಿಕೂಟದೊಂದಿಗೆ ಗುರುತಿಸಿಕೊಂಡಿರುವ ಟಿಡಿಪಿ, ತೆಲಂಗಾಣ ಜನ ಸಮಿತಿ, ಸಿಪಿಐ ನಾಯಕರೂ ಸಹ ಸೋನಿಯಾ, ರಾಹುಲ್ ಗಾಂಧಿ ಅವರೊಂದಿಗೆ ವೇದಿಕೆ ಹಂಚಿಕೊಂಡಿದ್ದರು.
ಪ್ರಚಾರ ಸಭೆಯಲ್ಲಿ ತೆಲಂಗಾಣ ರಚನೆ ಕುರಿತೂ ಮಾತನಾಡಿರುವ ಸೋನಿಯಾ ಗಾಂಧಿ, ರಾಜಕೀಯವಾಗಿ ಪ್ರತಿಕೂಲ ಪರಿಣಾಮ ಎದುರಿಸಬೇಕಾಗುತ್ತದೆ ಎಂಬುದು ಗೊತ್ತಿದ್ದರೂ ತೆಲಂಗಾಣ ರಾಜ್ಯ ರಚನೆ ಮಾಡಿದೆವು. ತೆಲಂಗಾಣ ರಚನೆ ಸುಲಭದ್ದಾಗಿರಲಿಲ್ಲ ಎಂದು ಸೋನಿಯಾ ಗಾಂಧಿ ಹೇಳಿದ್ದಾರೆ.