ನವದೆಹಲಿ: ತೆಲಂಗಾಣ ಪ್ರದೇಶ ಕಾಂಗ್ರೆಸ್ ಸಮಿತಿ ಕಾರ್ಯಾಧ್ಯಕ್ಷರಾಗಿ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಹಾಗೂ ಮಾಜಿ ಸಂಸದ ಮೊಹಮ್ಮದ್ ಅಜರುದ್ದೀನ್ ಅವರನ್ನು ಶುಕ್ರವಾರ ನೇಮಕ ಮಾಡಲಾಗಿದೆ.
ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಮೊಹಮ್ಮದ್ ಅಜರುದ್ದೀನ್ ಅವರನ್ನು
ಟಿಪಿಸಿಸಿ ಕಾರ್ಯಾಧ್ಯಕ್ಷರನ್ನಾಗಿ ಹಾಗೂ, ಬಿಎಂ ವಿನೋದ್ ಕುಮಾರ್ ಮತ್ತು ಜಾಫರ್ ಜಾವೇದ್ ಅವರನ್ನು ಟಿಪಿಸಿಸಿ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಿದ್ದಾರೆ.
ತೆಲಂಗಾಣ ಕಾಂಗ್ರೆಸ್ ಸಮಿತಿಗೆ ಎಂಟು ನೂತನ ಪ್ರಧಾನ ಕಾರ್ಯದರ್ಶಿಗಳನ್ನು ಮತ್ತು ನಾಲ್ವರು ಕಾರ್ಯದರ್ಶಿಗಳನ್ನು ಸಹ ರಾಹುಲ್ ನೇಮಕ ಮಾಡಿದ್ದಾರೆ.
ಟಿಪಿಸಿಸಿ ಕಾರ್ಯಾಧ್ಯಕ್ಷ ಹುದ್ದೆಗೆ ಶಿಫಾರಸ್ಸು ಮಾಡಲಾಗಿದ್ದ ಅಜರುದ್ದಿನ್ ಅವರ ಹೆಸರನ್ನು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅನುಮೂದಿಸಿದ್ದಾರೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಅಶೋಕ್ ಗೆಹ್ಲೋಟ್ ಅವರು ಇಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
1989 ರಲ್ಲಿ ಭಾರತ ಕ್ರಿಕೆಟ್ ತಂಡದ ನಾಯಕರಾಗಿದ್ದ ಮಧ್ಯಮ ಕ್ರಮಾಂಕದ ಬ್ಯಾಟ್ಸ್ ಮನ್ ಅಜರುದ್ದಿನ್ ಅವರಿಗೆ ಈಗ 55 ವರ್ಷ ವಯಸ್ಸು. ಕ್ರಿಕೆಟ್ ಬದುಕಿನ ನಂತರ 2009 ರ ಫೆಬ್ರವರಿಯಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಪಕ್ಷ ಸೇರಿದ ಅಜರುದ್ದಿನ್, 2009 ರ ಲೋಕಸಭಾ ಚುನಾವಣೆಯಲ್ಲಿ ಉತ್ತರ ಪ್ರದೇಶದ ಮೊರದಾಬಾದ್ ನಿಂದ ಕಾಂಗ್ರೆಸ್ ಸಂಸದರಾಗಿ ಆಯ್ಕೆಯಾಗಿದ್ದರು.