ಪೆಟ್ರೋಲ್, ಡೀಸೆಲ್ ಜಿಎಸ್‌ಟಿ ವ್ಯಾಪ್ತಿಗೆ ತನ್ನಿ: ಪ್ರಧಾನಿ ಮೋದಿಗೆ ರಾಹುಲ್ ಆಗ್ರಹ
ತೈಲ ಬೆಲೆ ಏರಿಕೆಯಿಂದ ಜನ ರೋಸಿ ಹೋಗಿದ್ದು....
ನವದೆಹಲಿ: ತೈಲ ಬೆಲೆ ಏರಿಕೆಯಿಂದ ಜನ ರೋಸಿ ಹೋಗಿದ್ದು, ಕೂಡಲೇ ಪೆಟ್ರೋಲ್ ಮತ್ತು ಡೀಸೆಲ್ ಉತ್ಪನ್ನಗಳನ್ನು ಜಿಎಸ್‌ಟಿ ವ್ಯಾಪ್ತಿಗೆ ತರಬೇಕು ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶುಕ್ರವಾರ ಆಗ್ರಹಿಸಿದ್ದಾರೆ.
ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಗೆ ಕೇಂದ್ರ ಸರ್ಕಾರದ ಅಬಕಾರಿ ಸುಂಕ ಕಾರಣ ಎಂದು ಈ ಹಿಂದೆ ಕಾಂಗ್ರೆಸ್ ಆರೋಪಿಸಿತ್ತು. ಆದರೆ ನಿನ್ನೆಯಷ್ಟೆ ಕೇಂದ್ರ ಸರ್ಕಾರ. 2.50 ರುಪಾಯಿ ಅಬಕಾರಿ ಸುಂಕ ಕಡಿತಗೊಳಿಸಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಅನ್ನು ಜಿಎಸ್‌ಟಿ ವ್ಯಾಪ್ತಿಗೆ ತರಬೇಕು ಎಂದು ರಾಹುಲ್ ಒತ್ತಾಯಿಸಿದ್ದಾರೆ.
ಕೇಂದ್ರ ಸರ್ಕಾರ ಅಬಕಾರಿ ಸುಂಕ ಇಳಿಸಿರುವುದು ಅತ್ಯಲ್ಪ. ಮೋದಿಜಿ ದಯಮಾಡಿ ಪೆಟ್ರೋಲ್ ಮತ್ತು ಡೀಸೆಲ್ ಅನ್ನು ಜಿಎಸ್ ಟಿ ವ್ಯಾಪ್ತಿಗೆ ತನ್ನಿ ಎಂದು ರಾಹಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.
ಈ ಮಧ್ಯೆ, ಐದು ರಾಜ್ಯಗಳಲ್ಲಿ ಸದ್ಯವೇ ವಿಧಾನಸಭಾ ಚುನಾವಣೆ ಎದುರಾಗಲಿದ್ದು, ಚುನಾವಣೆಗೂ ಮುನ್ನ ಪ್ರಧಾನಿ ಮೋದಿ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಅಲ್ಪ ಇಳಿಸಿರುವುದು ಚುನಾವಣಾ ಗಿಮಿಕ್ ಎಂದು ಕಾಂಗ್ರೆಸ್ ಮುಖ್ಯ ವಕ್ತಾರ ರಣದೀಪ್ ಸುರ್ಜೆವಾಲಾ ಆರೋಪಿಸಿದ್ದಾರೆ. ಅಲ್ಲದೆ ಸರ್ಕಾರದ ಈ ಕ್ರಮವು ಜನರ ಮರಣ ದಂಡನೆ ಶಿಕ್ಷೆಯನ್ನು ಜೀವಾವಧಿಗೆ ಇಳಿಸಿದ ಹಾಗೆ ಆಗಿದೆ ಎಂದು ಲೇವಡಿ ಮಾಡಿದ್ದಾರೆ.