ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ
ಮುಂಬೈ: ಡಜನ್ ಗೂ ಹೆಚ್ಚು ಪತ್ರಕರ್ತೆಯರಿಂದ ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಕೇಂದ್ರ ಸಚಿವ ಎಂ.ಜೆ.ಅಕ್ಬರ್ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದ ಕೇಂದ್ರ ಸರ್ಕಾರದ ವಿರುದ್ಧ ಬಿಜೆಪಿ ಮಿತ್ರ ಪಕ್ಷ ಶಿವಸೇನೆ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.
ಮಹಿಳೆಯರೊಂದಿಗೆ ಅಸಭ್ಯವಾಗಿ ನಡೆದುಕೊಳ್ಳುವವರೆಲ್ಲ ಕೇಂದ್ರ ಸಂಪುಟದಲ್ಲಿದ್ದಾರೆ ಮತ್ತು ಅವರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದಿರುವುದು ದುಷ್ಕೃತ್ಯಕ್ಕೆ ಪ್ರೋತ್ಸಾಹ ನೀಡಿದಂತೆ ಎಂದು ಶಿವಸೇನೆ ಮುಖವಾಣಿ ಸಾಮ್ನಾ ವರದಿ ಮಾಡಿದೆ.
ಮಿ ಟೂ ಅಭಿಯಾನದಲ್ಲಿ ವಿದೇಶಾಂಗ ಖಾತೆ ರಾಜ್ಯ ಸಚಿವ ಎಂ.ಜೆ.ಅಕ್ಬರ್ ವಿರುದ್ಧ ಪತ್ರಕರ್ತೆಯರು ಲೈಂಗಿಕ ಕಿರುಕುಳ ಆರೋಪ ಮಾಡಿದ್ದು, ಈ ಆರೋಪಗಳನ್ನು ಅಕ್ಬರ್ ಸ್ಪಷ್ಟವಾಗಿ ತಳ್ಳಿಹಾಕಿದ್ದಾರೆ. ಅಲ್ಲದೆ ತಮ್ಮ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿದ ಮಹಿಳೆಯರ ವಿರುದ್ಧ ಕ್ರಿಮಿನಲ್ ಮಾನಹಾನಿ ಪ್ರಕರಣ ದಾಖಲಿಸಿದ್ದಾರೆ.