ಕೆಲಸದ ಸ್ಥಳದಲ್ಲಿ ಲೈಂಗಿಕ ಕಿರುಕುಳ: ರಾಜನಾಥ್ ಸಿಂಗ್ ನೇತೃತ್ವದಲ್ಲಿ ಸಚಿವರ ಸಮಿತಿ ರಚನೆ
ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲೆ ನಡೆಯುತ್ತಿರುವ ಲೈಂಗಿಕ ದೌರ್ಜನ್ಯ ಪ್ರಕರಣಗಳನ್ನು ತಡೆಯಲು...
ನವದೆಹಲಿ: ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲೆ ನಡೆಯುತ್ತಿರುವ ಲೈಂಗಿಕ ದೌರ್ಜನ್ಯ ಪ್ರಕರಣಗಳನ್ನು ತಡೆಯಲು ಸೂಕ್ತ ಕಾನೂನು ಕ್ರಮ ಮತ್ತು ಸಾಂಸ್ಥಿಕ ಚೌಕಟ್ಟುಗಳನ್ನು ಬಲಪಡಿಸಲು ಕೇಂದ್ರ ಸರ್ಕಾರ ಗೃಹ ಸಚಿವ ರಾಜನಾಥ್ ಸಿಂಗ್ ನೇತೃತ್ವದಲ್ಲಿ ಸಚಿವರ ಸಮಿತಿ ರಚಿಸಿದೆ.
ಸಚಿವರ ಸಮಿತಿಯಲ್ಲಿ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ, ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಮಹಿಳಾ, ಮಕ್ಕಳ ಅಭಿವೃದ್ಧಿ ಸಚಿವೆ ಮನೇಕಾ ಗಾಂಧಿ ಇದ್ದಾರೆ ಎಂದು ಗೃಹ ಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ.
ಈ ಸಚಿವರ ಸಮಿತಿ ಪ್ರಸ್ತುತ ಇರುವ ಕಾನೂನು ಮತ್ತು ಸಾಂಸ್ಥಿಕ ಚೌಕಟ್ಟುಗಳನ್ನು ಪರಿಶೀಲಿಸಲಿದೆ ಎಂದು ಅವರು ಅಧಿಕಾರಿಗಳು ಹೇಳಿದ್ದಾರೆ.
ಭಾರತದಲ್ಲಿ #MeToo ಅಭಿಯಾನ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಈ ಸಚಿವ ಸಮಿತಿ ರಚಿಸಿದೆ.
#MeToo ಅಭಿಯಾನದಲ್ಲಿ ಮಾಜಿ ಕೇಂದ್ರ ಸಚಿವ ಎಂ.ಜೆ.ಅಕ್ಬರ್ ಅವರ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಅವರು ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಿದ್ದರು.