ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಆರಂಭ: ಪಕ್ಷ ಉನ್ನತ ನಾಯಕರೊಂದಿಗೆ ಅಮಿತ್ ಶಾ ಮಹತ್ವದ ಚರ್ಚೆ
ನವದೆಹಲಿ: ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಶನಿವಾರ ಆರಂಭಗೊಂಡಿದ್ದು, ಸಭೆಯನ್ನು ಉದ್ಘಾಟನೆ ಮಾಡಿರುವ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಪಕ್ಷದ ಉನ್ನತ ನಾಯಕರೊಂದಿಗೆ ಮಹತ್ವದ ಚರ್ಚೆ ನಡೆಸುತ್ತಿದ್ದಾರೆ.
ಎರಡು ದಿನಗಳ ಕಾಲ ರಾಜಧಾನಿ ದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಣಿ ಸಭೆ ನಡೆಯಲಿದ್ದು, ದೇಶದ ವಿವಿಧ ರಾಜ್ಯಗಳ ಬಿಜೆಪಿ ನಾಯಕರು ಪಾಲ್ಗೊಂಡಿದ್ದಾರೆ.
ಕಾರ್ಯಕಾರಿಣಿ ಸಭೆಯನ್ನು ಉದ್ಘಾಟಿಸಿ ಮಾತನಾಡಿರುವ ಅಮಿತ್ ಶಾ ಅವರು, 2014 ರಲ್ಲಿ ಬಿಜೆಪಿ ಭರ್ಜರಿ ಗೆಲವು ಸಾಧಿಸಿದಂತೆಯೇ 2019ರ ಲೋಕಸಭಾ ಚುನಾವಣೆಯಲ್ಲಿಯೂ ಗೆಲುವು ಸಾಧಿಸಲು ನಾಯಕರು ಕಾರ್ಯನಿರ್ವಹಿಸಬೇಕೆಂದು ಹೇಳಿದ್ದಾರೆ.
ಸಭೆಯಲ್ಲಿ ಅಜಯ ಬಿಜೆಪಿ ಮಂತ್ರವನ್ನು ಅಳವಡಿಸಿಕೊಳ್ಳಲಾಗಿದೆ. ಮುಂದಿನ ದಿನಗಳಲ್ಲಿ ಐದು ರಾಜ್ಯಗಳಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು ಈ ಐದೂ ರಾಜ್ಯಗಳಲ್ಲಿಯೂ ಬಿಜೆಪಿ ಗೆಲವು ಸಾಧಿಸಲು ಕಾರ್ಯನಿರ್ವಹಿಸುವಂತೆ ಪಕ್ಷದ ನಾಯಕರಿಗೆ ಅಮಿತ್ ಶಾ ಕರೆ ನೀಡಿದ್ದಾರೆ. 2014ರ ಲೋಕಸಭಾ ಚುನಾವಣೆಯಲ್ಲಿ ಗೆಲವು ಸಾಧಿಸಿದ್ದಕ್ಕಿಂತಲೂ ಈ ಬಾರಿಯ ಚುನಾವಣೆಯಲ್ಲಿ ಹೆಚ್ಚು ಮತಗಳು ಸಿಗುವ ವಿಶ್ವಾಸ ಬಿಜೆಪಿಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.
ಕೇವಲ ಚುನಾವಣೆಯಷ್ಟೇ ಅಲ್ಲದೆ, ಸಭೆಯಲ್ಲಿ ಹಲವು ಮಹತ್ವದ ವಿಚಾರಗಳ ಬಗ್ಗೆ ನಾಯಕರು ಚರ್ಚೆ ನಡೆಸಲಿದ್ದಾರೆ. ಮೇಲ್ಜಾತಿ ಸಂಘಟನೆಗಳು ಆಕ್ರೋಶಿತವಾಗಿರುವ ನಡುವೆ ಮೋದಿ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಆರ್ಥಿಕ ಯಶಸ್ಸಿನ ಕುರಿತಂತೆ ಬೆಳಕು ಚೆಲ್ಲುವ ಬಗ್ಗೆ ಈ ಸಭೆಯಲ್ಲಿ ಮಾತುಕತೆಗಳು ನಡೆಯುವ ಸಾಧ್ಯತೆಗಳಿವೆ.
ತೈಲ ಬೆಲೆ ಏರಿಕೆ ಕುರಿತೂ ಪಕ್ಷದ ನಿಲುವು ಪ್ರಕಟವಾಗುವ ಸಾಧ್ಯತೆಗಳಿವೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಸೇರಿ ಪಕ್ಷದ ಹಿರಿಯ ನಾಯಕರು ಭಾಗವಹಿಸಲಿದ್ದಾರೆ. ದಲಿತರ ಓಲೈಕೆಯ ಉದ್ದೇಶದಿಂದ ನೂತನ ಅಂಬೇಡ್ಕರ್ ಅಂತರಾಷ್ಟ್ರೀಯ ಕೇಂದ್ರ ಸಭಾಂಗಣದಲ್ಲಿ ಸಭೆ ಆಯೋಜಿಸಿರುವುದು ಎಲ್ಲರ ಗಮನ ಸೆಳೆದಿದೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos