ಅಧಿಕಾರಕ್ಕೆ ಬರುವ ಹಗಲುಗನಸು ಕಾಣುವುದನ್ನು ನಿಲ್ಲಿಸಿ: ರಾಹುಲ್ ಗೆ ಅಮಿತ್ ಶಾ
ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಗೆದ್ದು, ಕೇಂದ್ರದಲ್ಲಿ ಅಧಿಕಾರಕ್ಕೆ...
ಜೈಪುರ: ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಗೆದ್ದು, ಕೇಂದ್ರದಲ್ಲಿ ಅಧಿಕಾರಕ್ಕೆ ಬರುವ ಹಗಲುಕನಸು ಕಾಣುವುದನ್ನು ನಿಲ್ಲಿಸಬೇಕು ಎಂದು ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು ಬುಧವಾರ ಹೇಳಿದ್ದಾರೆ.
ಇಂದು ರಾಜಸ್ಥಾನದ ಧಂಕ್ಯಾದಲ್ಲಿ ಬಿಜೆಪಿ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಅಮಿತ್ ಶಾ, ರಾಹುಲ್ ಬಾಬಾ ಹಗಲುಗನಸು ಕಾಣುವುದನ್ನು ನಿಲ್ಲಿಸಬೇಕು. ಕಾಂಗ್ರೆಸ್ ಎಂಥ ಪರಿಸ್ಥಿತಿಯಲ್ಲಿದೆ ಎಂದರೆ, ಮುಂದಿನ ದಿನಗಳಲ್ಲಿ ಬೈನಾಕ್ಯುಲರ್ ಇಲ್ಲದೇ ಅದನ್ನು ಪತ್ತೆ ಮಾಡುವುದು ಅಸಾಧ್ಯವಾಗಲಿದೆ ಎಂದರು.
ಕಳೆದ ನಾಲ್ಕು ವರ್ಷಗಳಲ್ಲಿ ಬಿಜೆಪಿ ನೇತೃತ್ವದ ಎನ್ ಡಿಎ ಸರ್ಕಾರ ಏನು ಮಾಡಿದೆ ಎಂದು ಪ್ರಶ್ನಿಸುತ್ತಿರುವ ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಅಮಿತ್ ಶಾ, ರಾಹುಲ್ ಕುಟುಂಬ ನಾಲ್ಕು ತಲೆಮಾರುಗಳ ಕಾಲ ಏನು ಮಾಡಿದೆ ಎಂಬುದನ್ನು ದೇಶದ ಜನ ತಿಳಿದುಕೊಳ್ಳಲು ಬಯಸಿದ್ದಾರೆ ಎಂದರು.
ಕಳೆದ ನಾಲ್ಕು ವರ್ಷಗಳಲ್ಲಿ ಬಿಜೆಪಿ ಸರ್ಕಾರ ರಾಜಸ್ಥಾನಕ್ಕೆ 2.63 ಲಕ್ಷ ಕೋಟಿ ನೀಡಿದೆ. ಆದರೆ ಕಾಂಗ್ರೆಸ್ ರಾಜ್ಯ ಮತ್ತು ಕೇಂದ್ರದಲ್ಲಿ ತಮ್ಮದೇ ಸರ್ಕಾರ ಇದ್ದರೂ ಕೇವಲ 1.09 ಲಕ್ಷ ಕೋಟಿ ನೀಡಿತ್ತು. ಕಾಂಗ್ರೆಸ್ ಕೈಯಲ್ಲಿ ದೇಶವಾಗಲೀ, ರಾಜಸ್ಥಾನವಾಗಲೀ ಭದ್ರವಾಗಿಲ್ಲ ಎಂದು ಶಾ ವಾಗ್ದಾಳಿ ನಡೆಸಿದರು.