ಜೈಪುರ: ಹಿಂದಿನ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ದೇಶದ ಬೆಳವಣಿಗೆಗೆ ಮತ್ತು ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಸಾಕಷ್ಟು ಕೆಲಸಗಳನ್ನು ಮಾಡಿದೆ. ಅವುಗಳ ಆಧಾರದ ಮೇಲೆ ದೇಶ ಇಂದು ಇಷ್ಟು ಎತ್ತರಕ್ಕೆ ಬೆಳೆದಿದೆ ಎಂದು ರಾಜಸ್ತಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೊಟ್ ಹೇಳಿದ್ದಾರೆ.
ಇಂದು ಜೈಪುರದಲ್ಲಿ 73ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಧ್ವಜಾರೋಹಣ ಮಾಡಿ ಮಾತನಾಡಿದ ಅವರು, ನರೇಂದ್ರ ಮೋದಿ ನೇತೃತ್ವದ ಸರ್ಕಾರ ಬಂದ ಮೇಲೆ ದೇಶದಲ್ಲಿ ಪ್ರತಿಯೊಂದು ಅಭಿವೃದ್ಧಿಯೂ 2014ರ ನಂತರ ಆಗಿದೆ ಎಂಬ ಭಾವನೆ ಮೂಡಿಸುವಂತೆ ಮಾಡಲಾಗುತ್ತಿದೆ. ಆದರೆ ಅದು ನಿಜವಲ್ಲ.
ಮಾಜಿ ಪ್ರಧಾನ ಮಂತ್ರಿಗಳಾದ ದಿವಂಗತ ಪಂಡಿತ್ ಜವಹರಲಾಲ್ ನೆಹರೂ, ಇಂದಿರಾ ಗಾಂಧಿ, ರಾಜೀವ್ ಗಾಂಧಿ ದೇಶದ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಭದ್ರ ಬುನಾದಿ ಹಾಕಿಕೊಟ್ಟು ಸಾಕಷ್ಟು ಕೊಡುಗೆ ನೀಡಿದ್ದಾರೆ. ಐಐಟಿ, ಐಐಎಂ, ಇಸ್ರೊ ಮತ್ತು ಇತರ ಪ್ರಮುಖ ಸಂಸ್ಥೆಗಳು ಸ್ಥಾಪನೆಯಾಗಿದ್ದು, ಮೂಲಭೂತ ಸೌಕರ್ಯಗಳಾಗಿದ್ದು, ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ಕ್ರಾಂತಿಯಾಗಿದ್ದು ಎಲ್ಲವೂ ಕಾಂಗ್ರೆಸ್ ನೇತೃತ್ವದ ಸರ್ಕಾರವಿದ್ದಾಗ, ಅವುಗಳಿಂದ ದೇಶದ ಬೆಳವಣಿಗೆಗೆ ದಾರಿಯಾಯಿತು ಎಂದರು.
ದೇಶದಲ್ಲಿ ಇಂದು ಕೆಲವು ಶಕ್ತಿಗಳು ಇತಿಹಾಸವನ್ನು ತಿರುಚುವ ಕೆಲಸ ಮಾಡುತ್ತಿದ್ದಾರೆ ಎಂದು ಸಹ ಗೆಹ್ಲೊಟ್ ನರೇಂದ್ರ ಮೋದಿ ನೇತೃತ್ವದ ಸರ್ಕಾರವನ್ನು ಪರೋಕ್ಷವಾಗಿ ಟೀಕಿಸಿದರು.
ದೇಶದಲ್ಲಿ ಇಂದು ಆರ್ಥಿಕ ಬೆಳವಣಿಗೆ ಕುಸಿಯುತ್ತಿದೆ, ಹೂಡಿಕೆಯಾಗುತ್ತಿಲ್ಲ, ಉದ್ಯೋಗ ಸೃಷ್ಟಿ ದೊಡ್ಡ ಸಮಸ್ಯೆ ಮತ್ತು ಸವಾಲಾಗಿದೆ. ಆರ್ಥಿಕತೆಯ ಪುನರುಜ್ಜೀವನಕ್ಕೆ ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.