ದೇಶ

ರೈಲ್ವೆ ಸಚಿವರನ್ನು ಭೇಟಿಯಾದ ಯಡಿಯೂರಪ್ಪ: ವಿವಿಧ ಯೋಜನೆ ಕುರಿತು ಚರ್ಚೆ  

Nagaraja AB

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಇಂದು ರೈಲ್ವೆ ಸಚಿವ ಪಿಯೂಷ್ ಗೋಯಲ್ ಅವರನ್ನು ಭೇಟಿಯಾಗಿ ವಿವಿಧ ಯೋಜನೆ ಕುರಿತಂತೆ ಚರ್ಚೆ ನಡೆಸಿದ್ದಾರೆ. ರಾಜ್ಯದಲ್ಲಿ ನೆನೆಗುದಿಗೆ ಬಿದ್ದಿರುವ ರೈಲ್ವೆ ಯೋಜನೆಗಳಿಗೆ ಮಂಜೂರಾತಿ ನೀಡುವಂತೆ ಮನವಿ ಮಾಡಿಕೊಂಡಿದ್ದಾರೆ.

ಬೆಂಗಳೂರು ನಗರದ ಸಂಚಾರಿ ದಟ್ಟಣೆ ನಿವಾರಿಸುವ ಉದ್ದೇಶದಿಂದ ಬೆಂಗಳೂರು-ಉಪನಗರ ರೈಲ್ವೆ ಯೋಜನೆ ಜಾರಿಗೆ ಅಗತ್ಯವಿರುವ ಎಲ್ಲಾ ಸಹಕಾರ ನೀಡುವಂತೆ ಕೋರಿದ್ದಾರೆ.

ಹಾಸನ- ಬೇಲೂರು- ಶೃಂಗೇರಿ ಹೊಸ ರೈಲು ಮಾರ್ಗ, ಬೀದರ್ - ನಾಂದೇಡ್ ರೈಲು ಮಾರ್ಗಕ್ಕೆ ಅನುಮೋದನೆ, ಕರ್ನಾಟಕದಲ್ಲಿ ರೈಲ್ವೆ ಪೊಲೀಸ್ ಬಲವರ್ಧನೆ ಸೇರಿದಂತೆ ರಾಜ್ಯದ ವಿವಿಧ ಯೋಜನೆಗಳಿಗೆ ಸಂಬಂಧಿಸಿದಂತೆ ಪಿಯೂಷ್ ಗೋಯಲ್ ಅವರ ಜೊತೆ ಯಡಿಯೂರಪ್ಪ ಚರ್ಚೆ ನಡೆಸಿದ್ದಾರೆ.

ಕೇಂದ್ರ ಕಲ್ಲಿದ್ದಲು ಮತ್ತು ಸಂಸದೀಯ ವ್ಯವಹಾರ ಸಚಿವ ಪ್ರಹ್ಲಾದ್ ಜೋಷಿ, ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ, ಶಾಸಕರಾದ ಜಗದೀಶ್ ಶೆಟ್ಟರ್, ಆರ್. ಅಶೋಕ್ , ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯ ಭಾಸ್ಕರ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

SCROLL FOR NEXT