ದೇಶ

ದೇಗುಲ ನೆಲಸಮ: ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ, ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ಬಂಧನ

Srinivas Rao BV

ಸಂತ ರವಿದಾಸ್ ದೇಗುಲ ನೆಲಸಮ ವಿರೋಧಿಸಿ ನಡೆಯುತ್ತಿದ್ದ ಪ್ರತಿಭಟನೆ, ಹಲವರ ಬಂಧನ

ನವದೆಹಲಿ: ಸಂತ ರವಿದಾಸ್ ದೇಗುಲ ನೆಲಸಮ ವಿರೋಧಿಸಿ ಭೀಮ್ ಆರ್ಮಿ ಕಾರ್ಯಕರ್ತರು ನಡೆಸುತ್ತಿದ್ದ ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಿದ್ದು, ಸಂಘಟನೆಯ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ನನ್ನು ಪೊಲೀಸರು ಬಂಧಿಸಿದ್ದಾರೆ.

ದಕ್ಷಿಣ ದೆಹಲಿಯ ತುಘಲಕಾಬಾದ್ ನಲ್ಲಿ ಪೊಲೀಸರು ಮತ್ತು ನೂರಾರು ಪ್ರತಿಭಟನಾಕಾರರ ನಡುವೆ ಘರ್ಷಣೆ ನಡೆದ ನಂತರ ಭೀಮ್ ಸೇನೆಯ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ಸೇರಿದಂತೆ 50 ಕ್ಕೂ ಹೆಚ್ಚು ಪ್ರತಿಭಟನಾಕಾರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘರ್ಷಣೆಯಲ್ಲಿ ಪ್ರತಿಭಟನಾಕಾರರು , ಅನೇಕ ಪೊಲೀಸರು ಗಾಯಗೊಂಡಿದ್ದಾರೆ. ಬಂಧಿತ ಆಜಾದ್ ಅವರನ್ನು ವಿಚಾರಣೆಗೆ ಒಳಪಡಿಸಲಾಗುವುದು ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ.

ಬುಧವಾರ ರಾತ್ರಿ ಕೆಲವು ಪ್ರತಿಭಟನಾಕಾರರು ಪೊಲೀಸರೊಂದಿಗೆ ವಾಗ್ವಾದ ನಡೆಸಿದ್ದು ನಂತರ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ. ಇದರಿಂದಾಗಿ ಹಲವು ಪೊಲೀಸರು ಗಾಯಗೊಂಡಿದ್ದಾರೆ ಎಂದು ಡಿಸಿಪಿ ಚಿನ್ಮಯ್‌ ಬೈಸ್ವಾಲ್‌ ಹೇಳಿಕೆ ನೀಡಿದ್ದಾರೆ. ಪ್ರತಿಭಟನಾಕಾರರು ವಾಹನಗಳನ್ನು ಧ್ವಂಸಗೊಳಿಸಿದ್ದು, ಇದಕ್ಕೆ ಪ್ರತಿಯಾಗಿ ಪೊಲೀಸರು ಲಾಠಿ ಚಾರ್ಜ್‌ ಮತ್ತು ಅಶ್ರುವಾಯು ಸಿಡಿಸಿದ್ದಾರೆ ಎಂದು ವರದಿಯಾಗಿದೆ.
 

SCROLL FOR NEXT