ದೇಶ

ಕಾಶ್ಮೀರ: ಮಾಜಿ ಸಿಎಂ ಫಾರೂಖ್ ಅಬ್ದುಲ್ಲಾ ಗೃಹ ಬಂಧನ ಮತ್ತೆ ಮೂರು ತಿಂಗಳು ವಿಸ್ತರಣೆ

Lingaraj Badiger

ಶ್ರೀನಗರ: ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ರದ್ದುಗೊಳಿಸಿದ ನಂತರ ಗೃಹ ಬಂಧನದಲ್ಲಿರುವ ಕಾಶ್ಮೀರ ಮಾಜಿ ಮುಖ್ಯಮಂತ್ರಿ ಫಾರೂಖ್ ಅಬ್ದುಲ್ಲಾ ಅವರ ಗೃಹ ಬಂಧನವನ್ನು ಮತ್ತೆ ಮೂರು ತಿಂಗಳು ವಿಸ್ತರಿಸಲಾಗಿದೆ ಎಂದು ಶನಿವಾರ ಅಧಿಕಾರಿಗಳು ತಿಳಿಸಿದ್ದಾರೆ.

ಕೇಂದ್ರ ಸರ್ಕಾರ ಕಣಿವೆ ರಾಜ್ಯಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ರದ್ದುಗೊಳಿಸಿದ ಬಳಿಕ ಸಾರ್ವಜನಿಕ ಸುರಕ್ಷತಾ ಕಾಯ್ದೆ(ಪಿಸಿಎ) ಅಡಿ ಫಾರೂಖ್ ಅಬ್ದುಲ್ಲಾ ಅವರನ್ನು ಬಂಧಿಸಿದ್ದು, ಅವರ ನಿವಾಸವನ್ನೇ ಸಬ್ ಜೈಲ್ ಆಗಿ ಪರಿವರ್ತಿಸಲಾಗಿದೆ.

ಪಿಸಿಎ ಕಾಯ್ದೆ ಅಡಿ ಫಾರು ಅಬ್ದುಲ್ಲಾ ಅವರ ಗೃಹ ಬಂಧನವನ್ನು ವಿಸ್ತರಿಸುವಂತೆ ಜಮ್ಮು –ಕಾಶ್ಮೀರ ಕೇಂದ್ರಾಡಳಿತ ಪ್ರದೇಶದ ಗೃಹ ಇಲಾಖೆಯ ಸಲಹಾ ಮಂಡಳಿ ಶಿಫಾರಸು ಮಾಡಿದೆ. ಹೀಗಾಗಿ ಅವರ ಗೃಹ ಬಂಧನವನ್ನು ಮತ್ತೆ ಮೂರು ತಿಂಗಳು ವಿಸ್ತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮೂರು ಬಾರಿ ಮುಖ್ಯಮಂತ್ರಿ ಹಾಗೂ ಐದು ಬಾರಿ ಸಂಸದರಾಗಿ ಆಯ್ಕೆಯಾಗಿರುವ 82 ವರ್ಷದ ಫಾರೂಖ್ ಅಬ್ದುಲ್ಲಾ ಅವರು ಪಿಸಿಎ ಕಾಯ್ದೆ ಅಡಿ ಬಂಧನಕ್ಕೊಳಗಾದ ದೇಶದ ಮೊದಲ ಮಾಜಿ ಮುಖ್ಯಮಂತ್ರಿಯಾಗಿದ್ದಾರೆ.

ಆಗಸ್ಟ್ 5ರಂದು ಕೇಂದ್ರ ಸರ್ಕಾರ ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸುತ್ತಿದ್ದ 370ನೇ ವಿಧಿ ರದ್ದುಗೊಳಿಸಿ,  ಜಮ್ಮು ಕಾಶ್ಮೀರ ಮತ್ತು ಲಡಾಖ್ ಅನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಘೋಷಿಸಿದ ನಂತರ ಫಾರೂಖ್ ಅಬ್ದುಲ್ಲಾ ಸೇರಿದಂತೆ ಹಲವು ಮುಖಂಡರು, ಕಾರ್ಯಕರ್ತರನ್ನು ಗೃಹ ಬಂಧನದಲ್ಲಿ ಇರಿಸಲಾಗಿದೆ.

SCROLL FOR NEXT