ದೇಶ

ವಿದ್ಯಾರ್ಥಿಗಳಲ್ಲೇ ಕೆಲವು ಜಿಹಾದಿಗಳು, ಮಾವೋವಾದಿಗಳು ಇದ್ದಾರೆ ಎಚ್ಚರ: ನಿರ್ಮಲಾ ಸೀತಾರಾಮನ್

Lingaraj Badiger

ನವದೆಹಲಿ: ಜಿಹಾದಿಗಳು, ಮಾವೋವಾದಿಗಳು ಹಾಗೂ ಪ್ರತ್ಯೇಕವಾದಿಗಳು ವಿದ್ಯಾರ್ಥಿ ಚಟುವಟಿಕೆಗಳಲ್ಲಿ ಸಕ್ರಿಯರಾಗುತ್ತಿದ್ದು, ಜನ ಅವರ ಬಗ್ಗೆ ಎಚ್ಚರಿಕೆ ವಹಿಸಬೇಕು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸೋಮವಾರ ಹೇಳಿದ್ದಾರೆ.

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ದೆಹಲಿಯ ಜಾಮಿಯಾ ವಿಶ್ವವಿದ್ಯಾಲಯದ ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಮೇಲೆ ಪೊಲೀಸರು ಹಲ್ಲೆ ನಡೆಸಿರುವ ಬಗ್ಗೆ ತಮ್ಮ ಗಮನಕ್ಕೆ ಬಂದಿಲ್ಲ ಎಂದಿರುವ ಕೇಂದ್ರ ಸಚಿವೆ, ಕಾಂಗ್ರೆಸ್ ಹತಾಶೆಯಿಂದ ಪೌರತ್ವ ಕಾಯ್ದೆ ವಿಚಾರದಲ್ಲಿ ಜನರನ್ನು ಪ್ರಚೋದಿಸುತ್ತಿದೆ ಎಂದು ಆರೋಪಿಸಿದರು.

ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿ ಕಾರ್ಯಕರ್ತರು ರಾಜಕಾರಣಿಗಳಾಗಿ ಇಂತಹ ಕೃತ್ಯಗಳಲ್ಲಿ ಭಾಗಿಯಾಗುವುದು ಹೊಸ ವಿಚಾರ ಏನಲ್ಲ ಎಂದು ನಿರ್ಮಲಾ ಸೀತಾರಾಮನ್ ಅವರು ಹೇಳಿದ್ದಾರೆ.

ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ನಿನ್ನೆ ದೆಹಲಿಯಲ್ಲಿ ಜಾಮಿಯಾ ಮಿಲ್ಲಿಯಾ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದ ವೇಳೆ ಪೊಲೀಸರು ಅವರ ಮೇಲೆ ಲಾಠಿ ಪ್ರಹಾರ ನಡೆಸಿ ಗುಂಡಿನ ದಾಳಿ ನಡೆಸಿರುವ ಹಾಗೂ ಕ್ಯಾಂಪಸ್‌ ಒಳಗೆ ನುಗ್ಗಿ ದಾಂಧಲೆ ಮಾಡಿರುವ ವೀಡಿಯೋ ವೈರಲ್ ಆಗಿದೆ. ಪೊಲೀಸರ ಕ್ರಮಕ್ಕೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಗುಂಡಿನ ದಾಳಿಯಲ್ಲಿ ಹಲವು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.

SCROLL FOR NEXT