ದೇಶ

ಸಿಎಎ ಪ್ರತಿಭಟನೆ: ಹಿಂಸಾಚಾರ ಯಾವುದೇ ಸಮಸ್ಯೆಗೂ ಪರಿಹಾರವಲ್ಲ- ಉಪ ರಾಷ್ಟ್ರಪತಿ

Manjula VN

ನವದೆಹಲಿ: ಪೌರತ್ವ ತಿದ್ದುಪಡಿ ಮಸೂದೆಗೆ ವಿರೋಧ ವ್ಯಕ್ತಪಡಿಸಿ ದೇಶದಾದ್ಯಂತ ನಡೆಯುತ್ತಿರುವ ಪ್ರತಿಭಟನೆ ಹಾಗೂ ಹಿಂಸಾಚಾರಕ್ಕೆ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ತೀವ್ರ ಬೇಸರ ವ್ಯಕ್ತಪಡಿಸಿದ್ದು, ಹಿಂಸಾಚಾರ ಯಾವುದೇ ಸಮಸ್ಯೆಗೂ ಪರಿಹಾರವಲ್ಲ ಎಂದು ಮಂಗಳವಾರ ಹೇಳಿದ್ದಾರೆ. 

ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ವೆಂಕಯ್ಯ ನಾಯ್ಡು ಅವರು, ಅಡಚಣೆ ಹಾಗೂ ವಿನಾಶಗಳತ್ತ ಅಲ್ಲದೆ, ನಿರ್ಮಾಣದತ್ತ  ಎಲ್ಲರೂ ಗಮನಹರಿಸಬೇಕು. ಭಾರತ ನಮ್ಮದು, ಸ್ವಂತ ಭಾರತದಲ್ಲಿರುವ ನಾವು ನಮ್ಮ ವರ್ತನೆಯನ್ನು ಬದಲಿಸಿಕೊಳ್ಳಬೇಕು. ವಿನಾಶಕ್ಕೆ ಮುಂದಾದರೆ, ನಮ್ಮ ದೇಶದ ಆಸ್ತಿಪಾಸ್ತಿಯನ್ನು ನಾಶ ಮಾಡಿದಂತೆ ಎಂದು ಹೇಳಿದ್ದಾರೆ. 

ಕೆಲವೆಡೆ ಪ್ರತಿಭಟನೆ ವೇಳೆ ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ನಾಶಪಡಿಸಿದ್ದಾರೆ. ಇದರಲ್ಲಿ ಯಾರು ನಷ್ಟ ಅನುಭವಿಸುವಂತಾಯಿತು? ನಮ್ಮ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಪ್ರತಿಭಟನೆ ನಡೆಸಬೇಕು. ಅದು ವ್ಯವಸ್ಥಿತವಾಗಿರಬೇಕು. ವಿನಾಶಕಾರಿಯಾಗಿರಬಾರದು. ಹಿಂಸೆ ಯಾವುದಕ್ಕೂ ಪರಿಹಾರವಲ್ಲ ಎಂದು ತಿಳಿಸಿದ್ದಾರೆ. 

ಭಾರತದ ನೆರೆಯ ರಾಷ್ಟ್ರಗಳಿಂದ ಅಂದರೆ ಪಾಕಿಸ್ತಾನ, ಆಫ್ಘಾನಿಸ್ತಾನ ಮತ್ತು ಬಾಂಗ್ಲಾದೇಶಗಳಲ್ಲಿ ಧರ್ಮದ ಆಧಾರದ ಮೇಲೆ ಕಿರುಕುಳ ಅನುಭವಿಸಿ ಭಾರತಕ್ಕೆ ವಲಸೆ ಬಹಂದಿರುವ 6 ಧಾರ್ಮಿಕ  ಅಲ್ಪಸಂಖ್ಯಾತ ಸಮುದಾಯಗಳಿಗೆ ಭಾರತದ ಪೌರತ್ವ ನೀಡುವ ಮಸೂದೆಯೇ ಪೌರತ್ವ ತಿದ್ದುಪಡಿ ಮಸೂದೆ-2019. 

ಹಳೆಯ ಕಾಯ್ದೆಯಲ್ಲಿ ವಿದೇಶಿಗರು ಕಾನೂನು ಬದ್ಧವಾಗಿ ಭಾರತಕ್ಕೆ ವಲಸೆ ಬಂದು ಇಲ್ಲಿ 12 ವರ್ಷ ಅದಕ್ಕಿಂತಲೂ ಹೆಚ್ಚು ವರ್ಷ ನೆಲೆಸಿದ್ದರೆ, ಪೌರತ್ವ ಪಡೆಯಲು ಅರ್ಹರಾಗಿದ್ದರು. ಆದರೆ, ಹೊಸ ತಿದ್ದುಪಡಿ ಕಾಯ್ದೆಯಲ್ಲಿ ಭಾರತಕ್ಕೆ ಮೇಲಿನ ಮೂರು ದೇಶಗಳಿಂದ ಅಕ್ರಮವಾಗಿ ವಲಸೆ ಬಂದಿದ್ದರೂ ಇಲ್ಲಿ 6 ವರ್ಷ ವಾಸಿದ್ದರೆ ಆರು ಧರ್ಮೀಯರು ಭಾರತದ ಪೌರತ್ವ ಪಡೆಯಲು ಅರ್ಹರಾಗಿರುತ್ತಾರೆ. ಇದರ ಅನುಸಾರ 2014ರ ಡಿ.31ರ ಒಳಗೆ ಭಾರತಕ್ಕೆ ವಲಸೆ ಬಂದ ಮುಸ್ಲಿಮೇತರ ನಿರಾಶ್ರಿತರು ಭಾರತದ ಪೌರತ್ವ ಪಡೆಯಲು ಅರ್ಹರು. 

ಪೌರತ್ವ ತಿದ್ದುಪಡಿ ಮಸೂದೆಯಲ್ಲಿ ಮುಸ್ಲಿಂ ಸಮುದಾಯವನ್ನು ಹೊರಗಿಟ್ಟಿರುವುದು ಅಥವಾ ಧರ್ಮದ ಆಧಾರದ ಮೇಲೆ ಪೌರತ್ವ ನೀಡುತ್ತಿರುವುದು ಈ ತಿದ್ದುಪಡಿ ವಿರೋಧಕ್ಕೆ ಮೊದಲ ಕಾರಣ. ಇದು ಸಂವಿಧಾನದ 14ನೇ ವಿಧಿಯನ್ನು ಉಲ್ಲಂಘಿಸುತ್ತದೆ. ಭಾರತದ ಜಾತ್ಯತೀತ ರಾಷ್ಟ್ರ. ಹಾಗಾಗಿ ಧರ್ಮದ ಆಧಾರದ ಮೇಲೆ ಪೌರತ್ವ ನೀಡುವುದು ಸರಿಯಲ್ಲ ಎಂದು ವಿರೋಧ ಪಕ್ಷಗಳು ಮಸೂದೆಯನ್ನು ವಿರೋಧಿಸುತ್ತಿವೆ. 

ಹಾಗೆಯೇ ಕೇಂದ್ರ ಸರ್ಕಾರ ನೆರೆಯ ರಾಷ್ಟ್ರಗಳಿಂದ ಕಿರುಕುಳ ಅನುಭವಿಸಿ ವಲಸೆ ಬಂದ ಧಾರ್ಮಿಕ ಅಲ್ಪ ಸಂಖ್ಯಾತರಿಗೆ ಪೌರತ್ವ ನೀಡುತ್ತಿದ್ದೇವೆಂದು ಹೇಳುತ್ತಿದೆ. ಆದರೆ, ಈ ತಿದ್ದುಪಡಿ ಮಸೂದೆಯು ಎಲ್ಲಾ ಅಲ್ಪ ಸಂಖ್ಯಾತ ಸಮುದಾಯಗಳನ್ನು ಮತ್ತು ಎಲ್ಲಾ ನೆರೆ ರಾಷ್ಟ್ರಗಳನ್ನು ಒಳಗೊಂಡಿಲ್ಲ. ಪಾಕಿಸ್ತಾನದಲ್ಲಿ ಅಹ್ಮದಿಯೂ ಮತ್ತು ಶಿಯಾ ಮುಸ್ಲಿಂ ಸಮುದಾಯಗಳೂ ತಾರತಮ್ಯವನ್ನು ಅನುಭವಿಸುತ್ತಿವೆ. ಬರ್ಮಾದಲ್ಲಿ ರೊಹಿಂಗ್ಯಾ ಮುಸ್ಲಿಮರು ಮತ್ತು ಹಿಂದೂಗಳು ಕಿರುಕುಳ ಅನುಭವಿಸುತ್ತಿದ್ದಾರೆ. ಶ್ರೀಲಂಕಾದಲ್ಲಿ ಹಿಂದುಗಳು, ಕ್ರಿಶ್ಚಿಯನ್ನರು ಮತ್ತು ತಮಿಳರು ತಾರತಮ್ಯವನ್ನು ಅನುಭವಿಸುತ್ತಿದ್ದಾರೆಂಬುದು ಮತ್ತೊಂದು ಬದಿಯ ವಾದ. 

SCROLL FOR NEXT