ನಾಗ್ಪುರ್: ಪೌರತ್ವ ತಿದ್ದುಪಡಿ ಕಾಯ್ದೆ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು, ದೇಶದಲ್ಲಿ ವಿದೇಶಿ ಹಿಂದೂ ಅಕ್ರಮ ವಲಸಿಗರಿಗೆ ನೀವು ಎಲ್ಲಿ ಮತ್ತು ಹೇಗೆ ನೆಲೆ ಕಲ್ಪಿಸುತ್ತೀರಿ? ಎಂದು ಪ್ರಶ್ನಿಸಿದ್ದಾರೆ.
ಇಂದು ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಯ ವೇಳೆ ಮಾತನಾಡಿದ ಮಹಾ ಸಿಎಂ, ಬೆಳಗಾವಿಯಲ್ಲಿ ಕರ್ನಾಟಕ ಹಾಗೂ ಮಹಾರಾಷ್ಟ್ರ ಗಡಿ ವಿಚಾರದಲ್ಲೂ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಪಕ್ಷಪಾತ ಮಾಡುತ್ತಿದೆ ಎಂದು ಆರೋಪಿಸಿದರು.
ವಿದೇಶಗಳಿಂದ ವಲಸೆಬರುವ ಹಿಂದೂಗಳಿಗೆ ನೀವು ದೇಶದಲ್ಲಿ ಎಲ್ಲಿ ಮತ್ತು ಹೇಗೆ ನೆಲೆ ಕಲ್ಪಿಸುತ್ತೀರಿ ಎಂಬುದು ನನಗೆ ಅರ್ಥವಾಗುತ್ತಿಲ್ಲ ಮತ್ತು ನಿಮ್ಮ ಈ ಕುರಿತು ಯಾವುದೇ ಯೋಜನೆ ಇದ್ದಂತೆ ಕಾಣುತ್ತಿಲ್ಲ ಎಂದರು.
ಲೋಕಸಭೆಯಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಬೆಂಬಲಿಸಿದ್ದ ಶಿವಸೇನೆ, ರಾಜ್ಯಸಭೆಯಲ್ಲಿ ಪೌರತ್ವ ಕಾಯ್ದೆ ವಿರೋಧಿಸಿ ಸದನದಿಂದ ಹೊರ ನಡೆದಿತ್ತು ಮತ್ತು ಕಾಯ್ದೆ ಬಗ್ಗೆ ಯಾವುದೇ ಸ್ಪಷ್ಟತೆ ಇಲ್ಲ ಎಂದು ಆರೋಪಿಸಿತ್ತು.