ನವದೆಹಲಿ: ರಾಮ ಜನ್ಮಭೂಮಿ- ಬಾಬ್ರಿ ಮಸೀದಿ ಭೂ ವಿವಾದಕ್ಕೆ ಸಂಬಂಧಿಸಿದ ಪ್ರಕರಣದ ವಿಚಾರಣೆಗಾಗಿ ಸುಪ್ರೀಂಕೋರ್ಟ್ ಐವರು ನ್ಯಾಯಾಧೀಶರನ್ನೊಳಗೊಂಡ ಸಾಂವಿಧಾನಿಕ ಪೀಠವನ್ನು ಸ್ಥಾಪಿಸಿದೆ.
ಸುಪ್ರೀಂಕೋರ್ಟ್ ಮುಖ್ಯ ನ್ಯಾಯಾಧೀಶ ರಂಜನ್ ಗೊಗೊಯಿ ನೇತೃತ್ವದಲ್ಲಿನ ಪೀಠದಲ್ಲಿ ನ್ಯಾಯಾಧೀಶರಾದ ಎಸ್ ಎ ಬೊಬ್ಡೆ, ಎನ್ ವಿ ರಾಮಣ್ಣ, ಯುಯು ಲಲಿತ್ ಮತ್ತು ಡಿ. ವೈ. ಚಂದ್ರಚೂಡ್ ಇದ್ದಾರೆ.
ಜನವರಿ 10 ರಂದು ಬೆಳಗ್ಗೆ 10 ಗಂಟೆಗೆ ಸಾಂವಿಧಾನಿಕ ಪೀಠದಲ್ಲಿ ಈ ಪ್ರಕರಣದ ವಿಚಾರಣೆ ನಡೆಯಲಿದೆ ಎಂದು ಸುಪ್ರೀಂಕೋರ್ಟ್ ವೆಬ್ ಸೈಟ್ ನೋಟಿಸ್ ನಲ್ಲಿ ತಿಳಿಸಲಾಗಿದೆ.