ನವದೆಹಲಿ: ಆರ್ಥಿಕವಾಗಿ ಹಿಂದುಳಿದ ಮೇಲ್ವರ್ಗದವರಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಶೇ. 10 ರಷ್ಟು ಮೀಸಲಾತಿ ಒದಗಿಸುವ ತಿದ್ದುಪಡಿ ಮಸೂದೆಯನ್ನು ವಿತ್ತ ಸಚಿವ ಅರುಣ್ ಜೇಟ್ಲಿ ಅವರು ಮಂಗಳವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ.
ಲೋಕಸಭೆ ಅಧಿವೇಶನದ ಕೊನೆಯ ದಿನವಾದ ಇಂದು ಮೇಲ್ವರ್ಗದ ಬಡವರಿಗೆ ಶೇ.10 ರಷ್ಟು ಮೀಸಲಾತಿ ಒದಗಿಸುವ ತಿದ್ದುಪಡಿ ಮಸೂದೆಯನ್ನು ಬಿಜೆಪಿ ನೇತೃತ್ವದ ಎನ್ ಡಿಎ ಸರ್ಕಾರ ಮಂಡಿಸಿದೆ.
ಮೀಸಲಾತಿ ತಿದ್ದುಪಡಿ ಮಸೂದೆ ಕುರಿತ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ ಅರುಣ್ ಜೇಟ್ಲಿ, ಈ ಮಸೂದೆಯಿಂದ ಸದ್ಯ ಇರುವ ಮೀಸಲಾತಿಗೆ ಯಾವುದೇ ತೊಂದರೆ ಆಗುವುದಿಲ್ಲ. ಆರ್ಥಿಕವಾಗಿ ಹಿಂದುಳಿದ ಮೇಲ್ವರ್ಗದವರಿಗೂ ಸಾಮಾಜಿಕ ನ್ಯಾಯ ಒದಗಿಸುವ ದೃಷ್ಟಿಯಿಂದ ಈ ಮಸೂದೆ ಮಂಡಿಸಲಾಗಿದೆ ಎಂದರು.
ಈ ಮೀಸಲಾತಿ ಮಸೂದೆಯನ್ನು ಕಾಂಗ್ರೆಸ್ ಸೇರಿದಂತೆ ಎಲ್ಲಾ ರಾಜಕೀಯ ಪಕ್ಷಗಳು ಬೆಂಬಲಿಸಿವೆ ಎಂದು ಅರಣ್ ಜೇಟ್ಲಿ ಲೋಕಸಭೆಗೆ ತಿಳಿಸಿದ್ದಾರೆ.
ಮೀಸಲಾತಿ ಶೇ.50 ಮೀರಬಾರದು ಎಂಬ ಸುಪ್ರೀಂ ಕೋರ್ಟ್ ಆದೇಶದ ಬಗ್ಗೆ ಮಾತನಾಡಿದ ಜೇಟ್ಲಿ, ಈ ಹಿಂದೆ ಕೆಲವು ರಾಜ್ಯಗಳು ಅಧಿಸೂಚನೆ ಮೂಲಕ ಮೀಸಲಾತಿ ಹೆಚ್ಚಿಸುವ ಯತ್ನ ಮಾಡಿ ವಿಫಲವಾಗಿವೆ. ಹೀಗಾಗಿ ಕಾನೂನಿಗೆ ತಿದ್ದುಪಡಿ ತರಲಾಗುತ್ತಿದೆ ಎಂದರು.
ಇದೇ ವೇಳೆ ಪ್ರತಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ ಜೇಟ್ಲಿ, ಬಡ ಜನರ ಸಬಲೀಕರಣದ ಬಗ್ಗೆ ಕಮ್ಯುನಿಸ್ಟರು ಅಸಮಾಧಾನ ವ್ಯಕ್ತಪಡಿಸುತ್ತಿರುವುದು ಭಾರತದಲ್ಲಿಯೇ ಮೊದಲು ಎಂದರು. ಅಲ್ಲದೆ ಕಾಂಗ್ರೆಸ್ ಮನಸಿಲ್ಲದ ಮನಸಿನಿಂದ ಮಸೂದೆಯನ್ನು ಬೆಂಬಲಿಸುತ್ತಿದೆ ಎಂದು ಟಾಂಗ್ ನೀಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics