ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ
ಜೈಪುರ: ಕೇಂದ್ರ ಸರ್ಕಾರದ ಕಾರ್ಯವೈಖರಿಯಿಂದ ಸಾಕಷ್ಟು ನೊಂದಿದ್ದ ರೈತರು ಇತ್ತೀಚಿನ ಪಂಚರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಸಾಮರ್ಥ್ಯವೇನೆಂಬುದನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ತೋರಿಸಿದ್ದಾರೆಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು ಬುಧವಾರ ಹೇಳಿದ್ದಾರೆ.
ರಾಜಸ್ಥಾನದಲ್ಲಿ ಸರ್ಕಾರ ರಚನೆ ಮಾಡಿದ ಬಳಿಕ ಇದೇ ಮೊದಲ ಬಾರಿಗೆ ಜೈಪುರದಲ್ಲಿ ರೈತ ರ್ಯಾಲಿಯಲ್ಲಿ ಮಾತನಾಡಿರುವ ಅವರು, ಸರ್ಕಾರದ ಕಾರ್ಯ ವೈಖರಿಯಿಂದ ಬೇಸರಗೊಂಡಿದ್ದ ರೈತರು ಮೂರು ರಾಜ್ಯಗಳಲ್ಲಿ ತಮ್ಮ ಶಕ್ತಿಯೇನೆಂಬುದನ್ನು ಪ್ರಧಾನಿ ಮೋದಿಗೆ ತೋರಿಸಿದ್ದಾರೆ. ರಾಜಸ್ಥಾನದಲ್ಲಿ ಆಡಳಿತ ನಡೆಸುತ್ತಿದ್ದರೂ ಬಿಜೆಪಿ ತನ್ನ ಅಧಿಕಾರವನ್ನು ಕಳೆದುಕೊಂಡಿತು ಎಂದು ಹೇಳಿದ್ದಾರೆ.
ಇದೇ ವೇಳೆ ಮುಂಬರುವ ಲೋಕಸಭಾ ಚುನಾವಣೆ 2019ರಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕಿದ್ದೇ ಆದರೆ, ದೇಶದಲ್ಲಿರೂವ ಪ್ರತೀ ರಾಜ್ಯದಲ್ಲಿಯೂ ರೈತರ ಸಾಲ ಮನ್ನಾ ಮಾಡುವುದಾಗಿ ಭರವಸೆ ನೀಡಿದ್ದಾರೆ.
ಬಳಿಕ ರಫೇಲ್ ಯುದ್ಧ ವಿಮಾನ ಖರೀದಿ ಕುರಿತಂತೆ ಪ್ರಧಾನಿ ಮೋದಿ ವಿರುದ್ದ ವಾಗ್ದಾಳಿ ನಡೆಸಿದ ಅವರು, ಚೌಕಿದಾರ್ ಲೋಕಸಭೆಯಲ್ಲಿ ಒಂದು ನಿಮಿಷ ನಿಂತು ರಫೇಲ್ ವಿಚಾರ ಕುರಿತು ಚರ್ಚೆ ನಡೆಸಲು ಸಿದ್ಧರಿಲ್ಲ ಎಂದು ತಿಳಿಸಿದ್ದಾರೆ.