ನವದೆಹಲಿ: ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ವೈದಕೀಯ ತಪಾಸಣೆಗಾಗಿ ಅಮೆರಿಕಕ್ಕೆ ತೆರಳಿದ್ದಾರೆ.
ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ 66 ವರ್ಷದ ಅರುಣ್ ಜೇಟ್ಲಿ ಅವರು ಕಳೆದ ವರ್ಷ ಏಪ್ರಿಲ್ ನಲ್ಲಿ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದರು. ಇದೀಗ ದಿಢೀರ್ ವೈದ್ಯಕೀಯ ತಪಾಸಣೆಗಾಗಿ ಅಮೆರಿಕಕ್ಕೆ ತೆರಳಿದ್ದಾರೆ. ಆದರೆ, ಯಾವಾಗ ವಾಪಸ್ ಬರಲಿದ್ದಾರೆ ಎಂಬುದನ್ನು ಬಹಿರಂಗಪಡಿಸಿಲ್ಲ.
ಜೇಟ್ಲಿ ಅವರು ಈಗ ತೊಡೆಯಲ್ಲಿ ಮೃದು ಅಂಗಾಂಶದ ಕ್ಯಾನ್ಸರ್ ನಿಂದ ಬಳಲುತ್ತಿದ್ದು, ಅದು ದೇಹದ ಇತರೆ ಭಾಗಗಳಿಗೆ ತ್ವರಿತವಾಗಿ ಹರಡುವ ಸಾಧ್ಯತೆ ಇದೆ ಎಂದು ದಿ ವೈರ್ ವರದಿ ಮಾಡಿದೆ.
ಫೆಬ್ರವರಿ 1 ರಂದು ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರದ ಆರನೇ ಹಾಗೂ ಕೊನೆ ಬಜೆಟ್ ಮಂಡಿಸಲು ಸಜ್ಜಾಗಿದ್ದ ಜೇಟ್ಲಿ ಅವರು ಈಗ ಚಿಕಿತ್ಸೆಗಾಗಿ ಅಮೆರಿಕಕ್ಕೆ ತೆರಳಿದ್ದು, ಅವರು ಶೀಘ್ರ ಗುಣಮುಖರಾಗಲಿ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಟ್ವೀಟ್ ಮಾಡಿದ್ದಾರೆ.