ದೇಶ

ಅಚ್ಚರಿಯಾದ್ರೂ ಸತ್ಯ... ಈ ಒಂದು ವಿಚಾರಕ್ಕೆ ಮೋದಿ ಸರ್ಕಾರಕ್ಕೆ ಬೆಂಬಲ ನೀಡಿದ ದೀದಿ..!

Srinivasamurthy VN
ನವದೆಹಲಿ: ಪಶ್ಚಿಮಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಮತ್ತು ಅವರ ತೃಣಮೂಲ ಕಾಂಗ್ರೆಸ್ ಪಕ್ಷ ಮೋದಿ ಮತ್ತು ಬಿಜೆಪಿ ವಿರುದ್ಧ ವಾಗ್ದಾಳಿಯಿಂದಲೇ ಇತ್ತೀಚೆಗೆ ಸುದ್ದಿಗೆ ಗ್ರಾಸವಾಗುತ್ತಿದೆ. ಆದರೆ ಈ ಬಾರಿ ಮೋದಿ ಸರ್ಕಾರಕ್ಕೆ ಮೊದಲ ಬಾರಿಗೆ ಮಹತ್ವದ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಬಲ ನೀಡಿ ಅಚ್ಚರಿಗೆ ಕಾರಣವಾಗಿದೆ.
ಹೌದು.... ಸಂಸತ್ ನಲ್ಲಿ ಭಾರಿ ಕೋಲಾಹಲಕ್ಕೆ ಕಾರಣವಾಗಿರುವ ಜಮ್ಮು ಮತ್ತು ಕಾಶ್ಮೀರ ವಿಚಾರಕ್ಕೆ ಸಂಬಂಧಿಸಿದಂತೆ ಟಿಎಂಸಿ ಪಕ್ಷ ಲೋಕಸಭೆಯಲ್ಲಿ ಮೋದಿ ಸರ್ಕಾರಕ್ಕೆ ಬೆಂಬಲ ನೀಡಿದೆ. ಜಮ್ಮು ಕಾಶ್ಮೀರದಲ್ಲಿ ರಾಷ್ಟ್ರಪತಿ ಆಡಳಿತವನ್ನು ಆರು ತಿಂಗಳ ಕಾಲ ವಿಸ್ತರಿಸುವ ಪ್ರಸ್ತಾಪವನ್ನು ಗೃಹ ಸಚಿವ ಅಮಿತ್ ಶಾ ಇಂದು ಲೋಕಸಭೆಯಲ್ಲಿ ಮಂಡಿಸಿದರು. ಈ ಹಿನ್ನೆಲೆಯಲ್ಲಿ ಲೋಕಸಭೆಯಲ್ಲಿ ರಾಷ್ಟ್ರಪತಿ ಆಳ್ವಿಕೆ ವಿಸ್ತರಣೆಯ ಪ್ರಸ್ತಾಪ ಮಂಡನೆಗೆ ಸಂಬಂಧಪಟ್ಟಂತೆ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಬೆಂಬಲ ಸೂಚಿಸಿದೆ.
ಅಂತೆಯೇ ಜಮ್ಮು ಮತ್ತು ಕಾಶ್ಮೀರದ ಮೀಸಲಾತಿ ತಿದ್ದುಪಡಿ ಮಸೂದೆ-2019 ಮಂಡನೆಗೂ ಟಿಎಂಸಿ ಬೆಂಬಲ ಸೂಚಿದೆ. ಆದರೆ ಕಾಶ್ಮೀರದಲ್ಲಿ ವಿಧಾನಸಭೆ ಚುನಾವಣೆ ನಡೆಸದಿರುವ ಬಗ್ಗೆ ಮಮತಾ ಬ್ಯಾನರ್ಜಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಟಿಎಂಸಿ ಮಾತ್ರವಲ್ಲ ಸಮಾಜವಾದಿ ಪಕ್ಷದಿಂದಲೂ ಬೆಂಬಲ
ಕಣಿವೆರಾಜ್ಯ ಕಾಶ್ಮೀರದಲ್ಲಿ ರಾಷ್ಟ್ರಪತಿ ಆಡಳಿತ ವಿಸ್ತರಣೆಗೆ ಸಂಬಂಧಿಸಿದಂತೆ ಸಮಾಜವಾದಿ ಪಕ್ಷವೂ ಸಹ ಬೆಂಬಲ ಸೂಚಿಸಿದೆ. ಈ ಬಗ್ಗೆ ರಾಜ್ಯಸಭೆಯಲ್ಲಿ ಮಾತನಾಡಿರುವ ಸಮಾಜವಾದಿ ಪಕ್ಷದ ಮುಖಂಡ ರಾಮ್ ಗೋಪಾಲ್ ಯಾದವ್, ನಾಳೆಯಿಂದ ಜಮ್ಮುಕಾಶ್ಮೀರದಲ್ಲಿ ರಾಷ್ಟ್ರಪತಿ ಆಳ್ವಿಕೆ ಕೊನೆಗೊಳ್ಳಲಿದೆ. ಆದ್ದರಿಂದ ರಾಷ್ಟ್ರಪತಿ ಆಳ್ವಿಕೆಯನ್ನು 6 ತಿಂಗಳ ಕಾಲ ವಿಸ್ತರಣೆ ಮಾಡಿರುವುದನ್ನು ನಮ್ಮ ಪಕ್ಷ ಬೆಂಬಲಿಸುತ್ತದೆ ಎಂದು ಹೇಳಿದ್ದಾರೆ.
SCROLL FOR NEXT