ದೇಶ

ಕೇರಳದಲ್ಲಿ ಮತ್ತೆ ಪ್ರವಾಹ, 3 ಜಿಲ್ಲೆಗಳಲ್ಲಿ ರೆಡ್ ಅಲರ್ಟ್, ಕಲ್ಲಾರ್ ಕುಟ್ಟಿ ಡ್ಯಾಮ್ ಗೇಟ್ ಓಪನ್!

Srinivasamurthy VN
ಕೊಚ್ಚಿ: ಅಸ್ಸಾಂ ಬೆನ್ನಲ್ಲೇ ದೇವರ ನಾಡು ಕೇರಳದಲ್ಲಿ ಮತ್ತೆ ಪ್ರವಾಹ ಭೀತಿ ಎದುರಾಗಿದ್ದು, ಕಣ್ಣೂರಿನಲ್ಲಿ ಪ್ರವಾಹ ಪರಿಸ್ಥಿತಿ ಏರ್ಪಟ್ಟಿದ್ದು, ಈಗಾಗಲೇ ಹವಾಮಾನ ಇಲಾಖೆ ಅಧಿಕಾರಿಗಳು ಕೇರಳದ 3 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಿದ್ದಾರೆ.
ಹವಾಮಾನ ಇಲಾಖೆ ಅಧಿಕಾರಿಗಳು ನೀಡಿರುವ ಮಾಹಿತಿ ಅನ್ವಯ ಕರ್ನಾಟಕ, ಕೇರಳ ಗಡಿ ಜಿಲ್ಲೆ ಕಾಸರಗೋಡು, ಕಲ್ಲಿಕೋಟೆ, ವಯನಾಡಿನಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ಮಲಪ್ಪುರಂ, ಇಡುಕ್ಕಿ ಮತ್ತು ಕಣ್ಣೂರಿನಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಜುಲೈ 22ರವರೆಗೂ ಕೇರಳದಲ್ಲಿ ಭಾರಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಕಳೆದೊಂದು ವಾರದಿಂದ ಕೇರಳದಾದ್ಯಂತ ವ್ಯಾಪಕ ಮಳೆಯಾಗುತ್ತಿದ್ದು, ಈ ಮೂರು ಜಿಲ್ಲೆಗಳು ಮಾತ್ರವಲ್ಲದೇ ಎರ್ನಾಕುಲಂ ನಲ್ಲೂ ಮಳೆಯ ಪ್ರಮಾಣ ಜೋರಾಗಿದ್ದು, ಇಲ್ಲೂ ಕೂಡ ರೆಡ್ ಅಲರ್ಟ್ ಘೋಷಣೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.
ಕಲ್ಲಾರ್ ಕುಟ್ಟಿ ಡ್ಯಾಮ್ ಗೇಟ್ ಓಪನ್!
ಕೇರಳದಲ್ಲಿ ಭಾರಿ ಮಳೆ ಮುಂದುವರೆದಿರುವಂತೆಯೇ ಕೇರಳದ ನದಿಗಳು ತುಂಬಿ ಹರಿಯುತ್ತಿದ್ದು, ಡ್ಯಾಗಳಿಗೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದೆ. ಅಂತೆಯೇ ಇಡುಕ್ಕಿ ಜಿಲ್ಲೆಯಲ್ಲಿರುವ ಕಲ್ಲಾರ್ ಕುಟ್ಟಿ ಡ್ಯಾಮ್ ನ ಒಂದು ಗೇಟ್ ತೆರೆದು ಅಪಾರ ಪ್ರಮಾಣದ ನೀರನ್ನು ಹೊರಗೆ ಬಿಡಲಾಗುತ್ತಿದೆ. ಪರಿಣಾಮ ಸುತ್ತಮುತ್ತಲ ಗ್ರಾಮಗಳಿಗೆ ಪ್ರವಾಹ ಭೀತಿ ಎದುರಾಗಿದೆ. ಮುಂಜಾಗ್ರತಾ ಕ್ರಮವಾಗಿ ಸ್ಥಳೀಯ ಗ್ರಾಮಗಳ ಜನರಿಗೆ ಎಚ್ಚರಿಕೆ ನೀಡಲಾಗಿದ್ದು, ಸುರಕ್ಷಿತ ಪ್ರದೇಶಗಳಿಗೆ ರವಾನೆಯಾಗುವಂತೆ ಸೂಚನೆ ನೀಡಿದ್ದಾರೆ.
ಪ್ರಸ್ತುತ ರೆಡ್ ಅಲರ್ಟ್ ಘೋಷಣೆ ಮಾಡಿರುವ ಹಿನ್ನಲೆಯಲ್ಲಿ ಇಡುಕ್ಕಿ, ಪಥನಂತಿಟ್ಟ, ಎರ್ನಾಕುಲಂ ಮತ್ತು ಕೊಟ್ಟಾಯಂ ಜಿಲ್ಲೆಗಳಲ್ಲಿನ ತಗ್ಗು ಪ್ರದೇಶ ಮತ್ತು ನದಿ ತೀರದಲ್ಲಿರುವ ಜನರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲಾಗುತ್ತಿದೆ. ಈಗಾಗಲೇ ಈ ಭಾಗದಲ್ಲಿ ಅಧಿಕಾರಿಗಳು ಜನರಿಗೆ ಎಚ್ಚರಿಕೆ ನೀಡಿದ್ದು, ಸುರಕ್ಷಿತ ಪ್ರದೇಶಗಳಿಗೆ ರವಾನೆಯಾಗುವಂತೆ ಸೂಚನೆ ನೀಡಿದ್ದಾರೆ. ಈ ನಾಲ್ಕು ಜಿಲ್ಲೆಗಳಲ್ಲಿ ಕಳೆದ ಮೂರು ದಿನಗಳಿಂದ ಬರೊಬ್ಬರಿ 20 ಸೆ.ಮೀ ಮಳೆಯಾಗುತ್ತಿದ್ದು, ಇಲ್ಲಿನ ಜಲಾಶಯಗಳಲ್ಲಿನ ನೀರಿನ ಪ್ರಮಾಣ ಗಣನೀಯವಾಗಿ ಏರಿಕೆಯಾಗುತ್ತಿದೆ. ಹೀಗಾಗಿ ಯಾವುದೇ ಕಾರಣಕ್ಕೂ ಮೀನುಗಾರರು ನದಿಗೆ ಮತ್ತು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.
SCROLL FOR NEXT