ದೇಶ

ಕಾಶ್ಮೀರ ವಿಚಾರದಲ್ಲಿ ಯಾರ ಮಧ್ಯಸ್ಥಿಕೆಯ ಅಗತ್ಯವಿಲ್ಲ: ರಕ್ಷಣಾ ಸಚಿವ ರಾಜನಾಥ್ ಸಿಂಗ್

Srinivasamurthy VN
ನವದೆಹಲಿ: ಭಾರತ ಮತ್ತು ಪಾಕಿಸ್ತಾನದ ನಡುವಿನ ತಿಕ್ಕಾಟಕ್ಕೆ ಕಾರಣವಾಗಿರುವ ಕಾಶ್ಮೀರ ವಿವಾದ ಸಂಬಂಧ ಯಾರ ಮಧ್ಯಸ್ಥಿಕೆಯೂ ಭಾರತಕ್ಕೆ ಬೇಕಿಲ್ಲ ಎಂದು ಕೇಂದ್ರ ಸರ್ಕಾರ ಖಡಕ್ ಎಚ್ಚರಿಕೆ ನೀಡಿದೆ.
ಕಾಶ್ಮೀರ ವಿಚಾರವಾಗಿ ತಾನು ಭಾರತ ಮತ್ತು ಪಾಕಿಸ್ತಾನದ ನಡುವೆ ಮಧ್ಯಸ್ಥಿಕೆ ವಹಿಸಲು ಸಿದ್ಧ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆ ಭಾರತದಲ್ಲಿ ಅಲ್ಲೋಲಕಲ್ಲೋಲ ಸೃಷ್ಟಿ ಮಾಡಿದ್ದು, ಈ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಖುದ್ಧು ಸ್ಪಷ್ಟನೆ ನೀಡಬೇಕು ಎಂದು ಕಾಂಗ್ರೆಸ್ ಸೇರಿದಂತೆ ಎಲ್ಲ ಪ್ರತಿಪಕ್ಷಗಳು ಪಟ್ಟು ಹಿಡಿದಿವೆ. ಇದೇ ವಿಚಾರವಾಗಿ ಲೋಕಸಭೆಯಲ್ಲಿ ಮಾತನಾಡಿರುವ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು, ಜಪಾನ್ ನಲ್ಲಿ ನಡೆದ ಪ್ರಧಾನಿ ಮೋದಿ ಮತ್ತು ಅಮೆರಿಕ ಅಧ್ಯಕ್ಷ ಟ್ರಂಪ್ ಭೇಟಿ ವೇಳೆ ಕಾಶ್ಮೀರ ವಿಚಾರವಾಗಿ ಯಾವುದೇ ಮಾತುಕತೆಯಾಗಿಲ್ಲ. ಹೀಗಾಗಿ ಅವರ ಮಧ್ಯಸ್ಥಿಕೆಯ  ಅವಶ್ಯಕತೆ ಇಲ್ಲ. ಅವರು ಮಾತ್ರವಲ್ಲ ಕಾಶ್ಮೀರ ವಿಚಾರವಾಗಿ ಬೇರಾವುದೇ ದೇಶಗಳ ಮಧ್ಯಸ್ಥಿಕೆಯನ್ನೂ ಭಾರತ ಸಹಿಸುವುದಿಲ್ಲ ಎಂದು ರಾಜನಾಥ್ ಸಿಂಗ್ ಸಂಸತ್ ಗೆ ಸ್ಪಷ್ಟಪಡಿಸಿದ್ದಾರೆ.
ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಅವರ ಅಮೆರಿಕ ಪ್ರವಾಸದ ವೇಳೆ ಅವರನ್ನು ಭೇಟಿ ಮಾಡಿದ್ದ ಅಮೆರಿಕ ಅಧ್ಯಕ್ಷ ಟ್ರಂಪ್, 'ಭಾರತ-ಪಾಕ್ ಒಪ್ಪಿದರೆ ಕಾಶ್ಮೀರ ವಿಷಯದಲ್ಲಿ ಮಧ್ಯಸ್ಥಿಕೆ ವಹಿಸಲು ಸಿದ್ಧ, ನಾನು ಸಹಾಯ ಮಾಡಬಹುದಾದರೆ, ಮಧ್ಯಸ್ಥಿಕೆ ವಹಿಸಲು ಇಚ್ಛಿಸುತ್ತೇನೆ ಎಂದು ಹೇಳಿದ್ದರು. ಅಲ್ಲದೆ ಈ ಹಿಂದಿನ ಭೇಟಿಯಲ್ಲಿ ಪ್ರಧಾನಿ ಮೋದಿ ಕೂಡ ಇದೇ ಪ್ರಸ್ತಾಪ ಮುಂದಿಟ್ಟಿದ್ದರು ಎಂದು ಹೇಳಿ ವಿವಾದ ಸೃಷ್ಟಿಸಿದ್ದಾರೆ.
SCROLL FOR NEXT