ದೇಶ

ಕಾಂಗ್ರೆಸ್ ಸಂಸದೀಯ ಪಕ್ಷದ ನಾಯಕಿಯಾಗಿ ಸೋನಿಯಾ ಗಾಂಧಿ ಆಯ್ಕೆ

Srinivasamurthy VN
ನವದೆಹಲಿ: ಕಾಂಗ್ರೆಸ್ ಸಂಸದೀಯ ಪಕ್ಷದ ನಾಯಕಿಯಾಗಿ ಸೋನಿಯಾ ಗಾಂಧಿ ಅವರು ಆಯ್ಕೆಯಾಗಿದ್ದಾರೆ ಎಂದು ತಿಳಿದುಬಂದಿದೆ.
ದೆಹಲಿಯಲ್ಲಿ ಇಂದು ನಡೆದ ಕಾಂಗ್ರೆಸ್ ಸಂಸದೀಯ ಪಕ್ಷದ ಸಭೆಯಲ್ಲಿ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ಇನ್ನು ಲೋಕಸಭಾ ಚುನಾವಣೆಯಲ್ಲಿನ ಹೀನಾಯ ಸೋಲಿನ ಬಳಿಕ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡಿರುವ ರಾಹುಲ್ ಗಾಂಧಿ ಮನವೊಲಿಕೆ ಕಸರತ್ತು ಬಿರುಸಿನಿಂದ ಸಾಗಿತ್ತು.
ಇಂದು ಬೆಳಿಗ್ಗೆ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಈ ಸ್ಥಾನಕ್ಕೆ ಮಾಜಿ ಪ್ರಧಾನಿ ಮನಮೋಹನ್​ ಸಿಂಗ್​ ಅವರು ಸೋನಿಯಾ ಹೆಸರನ್ನು ಸೂಚಿಸಿದ್ದರು ಎನ್ನಲಾಗಿದೆ.  ಈ ಮೊದಲು ಕರ್ನಾಟಕ ಕಾಂಗ್ರೆಸ್​ ಹಿರಿಯ ನಾಯಕ ಮಲ್ಲಿಕಾರ್ಜುನ​ ಖರ್ಗೆ ಸಂಸದೀಯ ನಾಯಕನಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಆದರೆ, ಅವರು ಈ ಬಾರಿಯ ಚುನಾವಣೆಯಲ್ಲಿ ಖರ್ಗೆ ಬಿಜೆಪಿ ಅಭ್ಯರ್ಥಿ ಉಮೇಶ್​ ಜಾಧವ್​ ವಿರುದ್ಧ ಸೋತಿದ್ದರು. 
ಈ ಬಗ್ಗೆ ಟ್ವೀಟ್​ ಮಾಡಿರುವ  ರಂದೀಪ್ ಸುರ್ಜೇವಾಲಾ​, "ಸೋನಿಯಾ ಗಾಂಧಿ ಅವರು ಕಾಂಗ್ರೆಸ್​ ಸಂಸದೀಯ ಪಕ್ಷದ ನಾಯಕರಾಗಿ ನೇಮಕಗೊಂಡಿದ್ದಾರೆ. ಕಾಂಗ್ರೆಸ್​​ ಮೇಲೆ ನಂಬಿಕೆ ಇಟ್ಟ 12.13 ಕೋಟಿ ಜನರಿಗೆ ಅವರು ಧನ್ಯವಾದ ಹೇಳಿದ್ದಾರೆ," ಎಂದು ಟ್ವೀಟ್ ಮಾಡಿದ್ದಾರೆ.
ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್​ ಹೀನಾಯವಾಗಿ ಸೋತಿತ್ತು. ಇದಾದ ನಂತರ ಕರೆದ ಪಕ್ಷದ ಸಭೆ ವೇಳೆ ರಾಹುಲ್​ ರಾಜೀನಾಮೆ ಕೊಡಲು ಮುಂದಾಗಿದ್ದರು. ಆದರೆ, ಪಕ್ಷದ ನಾಯಕರ ಒತ್ತಾಯದ ಮೇರೆಗೆ ಅವರು ಅಧ್ಯಕ್ಷ ಸ್ಥಾನದಲ್ಲಿ ಮುಂದುವರಿಯಲು ನಿರ್ಧರಿಸಿದ್ದರು.
SCROLL FOR NEXT