ದೇಶ

ರಾಷ್ಟ್ರಪತಿಗಳನ್ನು ಭೇಟಿ ಮಾಡಿ ನೂತನ ಸರ್ಕಾರ ರಚನೆಯ ಹಕ್ಕು ಮಂಡಿಸಿದ ಪ್ರಧಾನಿ ಮೋದಿ

Lingaraj Badiger
ನವದೆಹಲಿ: 2019ರ ಲೋಕಸಭೆ ಚುನಾವಣೆಯಲ್ಲಿ ಭರ್ಜರಿ ಬಹುಮತ ಪಡೆದಿರುವ ಬಿಜೆಪಿ ನೇತೃತ್ವದ ಎನ್ ಡಿಎ ಮೈತ್ರಿಕೂಟದ ಸಂಸದೀಯ ನಾಯಕ, ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಭೇಟಿ ಮಾಡಿ, ನೂತನ ಸರ್ಕಾರ ರಚನೆಯ ಹಕ್ಕು ಮಂಡಿಸಿದ್ದಾರೆ.
ನಿನ್ನೆಯಷ್ಟೇ ಸಚಿವ ಸಂಪುಟ ಸಭೆ ಕರೆದು 16ನೇ ಲೋಕಸಭೆ ವಿಸರ್ಜಿಸುವಂತೆ ರಾಷ್ಟ್ರಪತಿಗಳಿಗೆ ಶಿಫಾರಸು ಮಾಡಿದ್ದ ಪ್ರಧಾನಿ ಮೋದಿ ಅವರು ಇಂದು ನಡೆದ ಎನ್ ಡಿಎ ಸಂಸದರ ಸಭೆಯಲ್ಲಿ ನೂತನ ಎನ್ ಡಿಎ ಸಂಸದೀಯ ಮಂಡಳಿಯ ನಾಯಕರಾಗಿ ಆಯ್ಕೆಯಾಗಿದ್ದರು.
ಬಳಿಕ ರಾಷ್ಟ್ರಪತಿ ಭವನಕ್ಕೆ ತೆರಳಿದ ಪ್ರಧಾನಿ ಮೋದಿ, ತಮಗಿರುವ ಬಹುಮತದ ಪತ್ರವನ್ನು ನೀಡಿ, ನೂತನ ಸರ್ಕಾರ ರಚನೆಯ ಹಕ್ಕು ಮಂಡಿಸಿದ್ದಾರೆ.
ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ನರೇಂದ್ರ ಮೋದಿ ಅವರನ್ನು ಭಾರತದ ಪ್ರಧಾನಿಯಾಗಿ ನೇಮಕ ಮಾಡಿದ್ದು, ಅವರಿಗೆ ಪ್ರಮಾಣವಚನ ಸ್ವೀಕಾರ ಸಮಾರಂಭದ ದಿನಾಂಕ ಹಾಗೂ ಕೇಂದ್ರ ಸಂಪುಟಕ್ಕೆ ಆಯ್ಕೆಯಾಗುವ ಸದಸ್ಯರ ಪಟ್ಟಿ ನೀಡುವಂತೆ ರಾಷ್ಟ್ರಪತಿಗಳು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸೂಚಿಸಿದ್ದಾರೆ ಎಂದು ರಾಷ್ಟ್ರಪತಿ ಭವನ ಟ್ವೀಟ್ ಮಾಡಿದೆ.
ಪ್ರಧಾನಿ ಮೋದಿ ಅವರು ಪ್ರಮಾಣವಚನ ಸ್ವೀಕರಿಸುವ ದಿನಾಂಕವನ್ನು ಇದುವರೆಗೂ ಅಧಿಕೃತವಾಗಿ ಘೋಷಿಸಿಲ್ಲ. ಆದರೆ ಮೂಲಗಳ ಪ್ರಕಾರ ಮೇ 30ರಂದು ರಾಷ್ಟ್ರಪತಿ ಭವನದಲ್ಲಿ ಮೋದಿ ಎರಡನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎನ್ನಲಾಗಿದೆ.
SCROLL FOR NEXT