ದೇಶ

ಮಹಾ ರಾಜಕೀಯ ಬಿಕ್ಕಟ್ಟು: ಕುತೂಹಲ ಮೂಡಿಸಿದ ನಿತಿನ್ ಗಡ್ಕರಿ – ಅಹ್ಮದ್ ಪಟೇಲ್ ಭೇಟಿ

Lingaraj Badiger

ನವದೆಹಲಿ: ಮಹಾರಾಷ್ಟ್ರ ರಾಜಕೀಯ ಕ್ಷಣಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು, ಸರ್ಕಾರ ರಚನೆ ಸಂಬಂಧ ಬಿಜೆಪಿ–ಶಿವಸೇನಾ ಮೈತ್ರಿ ಮಧ್ಯೆ ಬಿಕ್ಕಟ್ಟು ಸೃಷ್ಟಿಯಾಗಿರುವ ಸಂದರ್ಭದಲ್ಲೇ ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಆಪ್ತ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಅಹ್ಮದ್ ಪಟೇಲ್ ಅವರು ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದು, ತೀವ್ರ ಕುತೂಹಲ ಮೂಡಿಸಿದೆ.

ಅಹ್ಮದ್ ಪಟೇಲ್ ಅವರು ಇಂದು ಬೆಳಿಗ್ಗೆ ದೆಹಲಿಯ ಮೋತಿಲಾಲ್ ನೆಹರು ಮಾರ್ಗದಲ್ಲಿರುವ ಗಡ್ಕರಿ ನಿವಾಸಕ್ಕೆ ತೆರಳಿ ಮಾತುಕತೆ ನಡೆಸಿದರು. ಬಳಿಕ, ರೈತರ ಸಮಸ್ಯೆಗಳ ಬಗ್ಗೆ ಚರ್ಚಿಸುವುದಕ್ಕಾಗಿ ಗಡ್ಕರಿ ಅವರನ್ನು ಭೇಟಿ ಮಾಡಿದ್ದಾಗಿ ಅವರು ತಿಳಿಸಿದ್ದಾರೆ.

ಬಿಜೆಪಿಯನ್ನು ಅಧಿಕಾರದಿಂದ ದೂರ ಇಡುವುದಕ್ಕಾಗಿ ಶಿವಸೇನಾಗೆ ಬಾಹ್ಯ ಬೆಂಬಲ ನೀಡಲು ಮಹಾರಾಷ್ಟ್ರದ ಕೆಲವು ಕಾಂಗ್ರೆಸ್‌ ನಾಯಕರು ಒಲವು ಹೊಂದಿದ್ದರು. ಆ ಕುರಿತು ಚರ್ಚೆಯೂ ನಡೆದಿತ್ತು. ಆದರೆ ಭಿನ್ನ ಸಿದ್ಧಾಂತ ಹೊಂದಿರುವ ಶಿವಸೇನಾಗೆ ಬೆಂಬಲ ನೀಡುವುದಿಲ್ಲ ಎಂದು ಸೋನಿಯಾ ಗಾಂಧಿ ಸ್ಪಷ್ಟಪಡಿಸಿದ್ದರು. ಈ ಎಲ್ಲ ಬೆಳವಣಿಗೆಗಳ ಮಧ್ಯೆ ಗಡ್ಕರಿ ಅವರನ್ನು ಅಹ್ಮದ್ ಪಟೇಲ್ ಭೇಟಿಯಾಗಿರುವುದು ಮತ್ತಷ್ಟು ಕುತೂಹಲಕ್ಕೆ ಕಾರಣವಾಗಿದೆ.

ಈ ಮಧ್ಯೆ, ಶಿವಸೇನಾಗೆ ಬೆಂಬಲ ನೀಡುವುದಿಲ್ಲ ಎಂದು ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರು ಸ್ಪಷ್ಟಪಡಿಸಿದ್ದು, ತಾವು ವಿರೋಧ ಪಕ್ಷದಲ್ಲಿ ಕುಳಿತುಕೊಳ್ಳುವುದಾಗಿ ಹೇಳಿದ್ದಾರೆ.

SCROLL FOR NEXT