ದೇಶ

ಉದ್ಧವ್ ಠಾಕ್ರೆ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪ್ರತಿಪಕ್ಷಗಳ ಒಗ್ಗಟ್ಟು ಪ್ರದರ್ಶನ ಇಲ್ಲ

Nagaraja AB

ನವದೆಹಲಿ: ಮೇ 2018ರಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್- ಜೆಡಿಎಸ್ ಮೈತ್ರಿ ಸರ್ಕಾರದ ಮುಖ್ಯಮಂತ್ರಿ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಪ್ರತಿಪಕ್ಷಗಳು ಶಕ್ತಿ ಪ್ರದರ್ಶಿಸಿದ್ದಂತೆ  ಮಹಾರಾಷ್ಟ್ರದಲ್ಲಿ ಇಂದು ಸಂಜೆ  ನಡೆಯಲಿರುವ ಉದ್ದವ್ ಠಾಕ್ರೆ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಪ್ರತಿಪಕ್ಷಗಳು ಒಗ್ಗಟ್ಟಿನ ಪ್ರದರ್ಶನ ತೋರುತ್ತಿಲ್ಲ ಎಂಬುದು ಮೂಲಗಳಿಂದ ತಿಳಿದುಬಂದಿದೆ.

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಕಾಂಗ್ರೆಸ್ ಆಡಳಿತ ಇರುವ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳು, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ , ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಆಹ್ವಾನ ನೀಡಲಾಗಿದೆ. ಆದರೆ, ಬಹುತೇಕ ಮಂದಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿಲ್ಲ ಎಂಬುದು ಮೂಲಗಳಿಂದ ತಿಳಿದುಬಂದಿದೆ.

ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು ಸಮಾರಂಭದಲ್ಲಿ ಹಾಜರಾಗಲಿದ್ದಾರೆ ಎಂದು ಪಕ್ಷದ ಮೂಲಗಳಿಂದ ತಿಳಿದುಬಂದಿದ್ದು, ಸೋನಿಯಾ ಗಾಂಧಿ, ಠಾಕ್ರೆ ಜೊತೆಗೆ ವೇದಿಕೆ ಹಂಚಿಕೊಳ್ಳದಿರಲು ನಿರ್ಧರಿಸಿದ್ದಾರೆ ಎನ್ನಲಾಗಿದೆ. 

ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಕಾರ್ಯಕ್ರಮಕ್ಕೆ ಬರುತ್ತಿಲ್ಲ ಎಂಬ ಸುದ್ದಿ ಕೇಳುತ್ತಿದ್ದಂತೆ ಶಿವಸೇನಾ ಮುಖಂಡ ಆದಿತ್ಯಾ ಠಾಕ್ರೆ ದೆಹಲಿಗೆ ದೌಡಾಯಿಸಿ , ಸೋನಿಯಾ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ಮಾಜಿ ಪ್ರಧಾನಿ ಮನ್ ಮೋಹನ್ ಸಿಂಗ್ ಅವರನ್ನು ಪ್ರತ್ಯೇಕವಾಗಿ ಭೇಟಿ ಮಾಡಿದ್ದಾರೆ.ಸರ್ಕಾರ ರಚನೆಯ ಹಕ್ಕು ಮಂಡಿಸಿದ ಬಳಿಕ ಮಹಾರಾಷ್ಟ್ರದಲ್ಲಿ ಶಿವಸೇನೆ ಸರ್ಕಾರ ರಚಿಸಲು ಬೆಂಬಲಿಸಿದ ಸೋನಿಯಾ ಗಾಂಧಿ ಅವರಿಗೆ ಉದ್ಧವ್ ಠಾಕ್ರೆ ಧನ್ಯವಾದ ಹೇಳಿದ್ದರು. 

ಆದಿತ್ಯ ಠಾಕ್ರೆ ಸೋನಿಯಾ ಗಾಂಧಿ ಭೇಟಿ ಮಾಡಿರುವ ಪೋಟೋವನ್ನು ಕಾಂಗ್ರೆಸ್ ಪಕ್ಷದ ಅಧಿಕೃತ ಟ್ವಿಟರ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ.  ಜುಲೈ ತಿಂಗಳಲ್ಲಿ ಆದಿತ್ಯ ಠಾಕ್ರೆ ಚಿಕ್ಕಪ್ಪ ಮತ್ತು ಮಹಾರಾಷ್ಟ್ರ ನವ ನಿರ್ಮಾಣ ಸೇನಾ ಮುಖ್ಯಸ್ಥ ರಾಜ್ ಠಾಕ್ರೆ  ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿದ್ದರು. 

ಪೂರ್ವ ನಿಗದಿತ ಕಾರ್ಯಕ್ರಮದಿಂದಾಗಿ ಕೇಜ್ರಿವಾಲ್ ಉದ್ದವ್ ಠಾಕ್ರೆ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿಲ್ಲ ಎಂದು ಮುಖ್ಯಮಂತ್ರಿ ಕಚೇರಿ ಮೂಲಗಳಿಂದ ತಿಳಿಸಲಾಗಿದೆ. ಕಳೆದ ವರ್ಷ ಬೆಂಗಳೂರಿನಲ್ಲಿ ನಡೆದ  ಎಚ್ ಡಿ ಕುಮಾರಸ್ವಾಮಿ ಪದ ಗ್ರಹಣ ಸಮಾರಂಭದಲ್ಲಿ ಬಹುತೇಕ ಪ್ರತಿಪಕ್ಷಗಳ ನಾಯಕರು ಪಾಲ್ಗೊಳ್ಳುವ ಮೂಲಕ ಒಗ್ಗಟ್ಟು ಪ್ರದರ್ಶಿಸಿದ್ದರು. 

SCROLL FOR NEXT