ದೇಶ

ಐಎನ್‌ಎಕ್ಸ್ ಮೀಡಿಯಾ ಹಗರಣ: ಚಿದಂಬರಂ ನ್ಯಾಯಾಂಗ ಬಂಧನ ಅವಧಿ ನವೆಂಬರ್ 13ರ ವರೆಗೆ ವಿಸ್ತರಣೆ

Lingaraj Badiger

ನವದೆಹಲಿ: ಐಎನ್‌ಎಕ್ಸ್ ಮೀಡಿಯಾ ಹಗರಣ ಸಂಬಂಧ ಬಂಧನಕ್ಕೊಳಗಾಗಿರುವ ಹಿರಿಯ ಕಾಂಗ್ರೆಸ್ ನಾಯಕ ಪಿ.ಚಿದಂಬರಂ ಅವರ ನ್ಯಾಯಾಂಗ ಬಂಧನ ಅವಧಿಯನ್ನು ನವೆಂಬರ್ 13ರ ವರೆಗೆ ವಿಸ್ತರಿಸಿ ದೆಹಲಿ ಕೋರ್ಟ್ ಬುಧವಾರ ಆದೇಶಿಸಿದೆ.

ಇಂದಿನವರೆಗೆ ಜಾರಿ ನಿರ್ದೇಶನಾಲಯ(ಇಡಿ)ದ ವಶದಲ್ಲಿದ್ದ ಚಿದಂಬರಂ ಅವರನ್ನು ಇಂದು ಇಡಿ ಅಧಿಕಾರಿಗಳು ವಿಶೇಷ ನ್ಯಾಯಾಧೀಶ ಅಜಯ್ ಕುಮಾರ್ ಕುಹರ್ ಅವರ ಮುಂದೆ ಹಾಜರುಪಡಿಸಿ, ಹೆಚ್ಚಿನ ವಿಚಾರಣೆಗಾಗಿ ಇನ್ನೂ ಒಂದು ದಿನ ತಮ್ಮ ವಶಕ್ಕೆ ನೀಡುವಂತೆ ಮನವಿ ಮಾಡಿದರು. ಆದರೆ ಇಡಿ ಅಧಿಕಾರಿಗಳ ಮನವಿಯನ್ನು ತಿರಸ್ಕರಿಸಿದ ನ್ಯಾಯಾಧೀಶರು, ಆರೋಪಿಯನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಜೈಲಿನಲ್ಲಿ ಚಿದಂಬರಂ ಅವರಿಗೆ ವೈದ್ಯಕೀಯ ಚಿಕಿತ್ಸೆ, ವೆಸ್ಟೆರ್ನ್ ಶೌಚಾಲಯ, ಸೂಕ್ತ ಭದ್ರತೆ ಮತ್ತು ಪ್ರತ್ಯೇಕ ಸೆಲ್ ನೀಡುವಂತೆ ಕೋರ್ಟ್, ತಿಹಾರ್ ಜೈಲಿನ ಅಧಿಕಾರಿಗಳಿಗೆ ಸೂಚಿಸಿದೆ.

ಅನಾರೋಗ್ಯದ ಹಿನ್ನೆಲೆಯಲ್ಲಿ ಮಾಜಿ ಕೇಂದ್ರ ಸಚಿವರಿಗೆ ಮನೆಯಿಂದಲೇ ಊಟ ತರಿಸಿಕೊಳ್ಳಲು ಕೋರ್ಟ್ ಅನುಮತಿ ನೀಡಿದೆ.

ಐಎನ್ ಎಕ್ಸ್ ಹಗರಣಕ್ಕೆ ಸಂಬಂಧಿಸಿದಂತೆ ಚಿದಂಬರಂ ಅವರನ್ನು ಕಳೆದ ಆಗಸ್ಟ್ 21ರಂದು ಸಿಬಿಐ ಅಧಿಕಾರಿಗಳು ಬಂಧಿಸಿದ್ದರು. ಬಳಿಕ ನ್ಯಾಯಾಲಯ ಅವರನ್ನು ನ್ಯಾಯಾಂಗ ಬಂಧನಕ್ಕೆ ಆದೇಶಿಸಿತ್ತು. ನಂತರ, ಜಾರಿ ನಿರ್ದೇಶನಾಲಯದ ಅಧಿಕಾರಿಗಳು (ಇಡಿ) ಅವರನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದರು.

SCROLL FOR NEXT