ದೇಶ

ಜೀವಹಾನಿ ತಡೆಯುವುದಕ್ಕಾಗಿ ಕಾಶ್ಮೀರದಲ್ಲಿ ನಿರ್ಬಂಧ, ನಾವು ಯಶಸ್ವಿಯಾಗಿದ್ವೇವೆ: ಅಧಿಕಾರಿಗಳು

Lingaraj Badiger

ಜಮ್ಮು: ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿದ ಬಳಿಕ ಕಣಿವೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ನಾವು ಯಶಸ್ವಿಯಾಗಿದ್ದೇವೆ ಎಂದು ಜಮ್ಮು ಮತ್ತು ಕಾಶ್ಮೀರ ರಾಜ್ಯಪಾಲರ ಸಲಹೆಗಾರ ಫಾರೂಖ್ ಖಾನ್ ಅವರು ಸೋಮವಾರ ಹೇಳಿದ್ದಾರೆ.

ಕಳೆದ ಒಂದು ತಿಂಗಳಲ್ಲಿ ಭದ್ರತಾ ಸಿಬ್ಬಂದಿ ಸಾರ್ವಜನಿಕರ ಮೇಲೆ ಒಂದೇ ಒಂದು ಗುಂಡು ಹಾರಿಸಿಲ್ಲ. ಈ ಕುರಿತು ಪಾಕಿಸ್ತಾನ ಸುಳ್ಳು ಸುದ್ದಿ ಹಬ್ಬಿಸುತ್ತಿದೆ ಎಂದು ಫಾರೂಖ್ ಖಾನ್ ಅವರು ಹೇಳಿದ್ದಾರೆ.

ಕಣಿವೆ ರಾಜ್ಯದ ಜನರ ಜೀವ ಕಾಪಾಡುವುದಕ್ಕಾಗಿ ಈ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಕಾಶ್ಮೀರ ಈಗ ನಿಧಾನವಾಗಿ ಸಹಜ ಸ್ಥಿತಿಯತ್ತ ಮರಳುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಕಾಶ್ಮೀರ ಕುರಿತು ವಿಶ್ವಸಂಸ್ಥೆ ಮಾನವ ಹಕ್ಕುಗಳ ಮುಖ್ಯಸ್ಥರು ತೀವ್ರ ಕಳವಳ ವ್ಯಕ್ತಪಡಿಸಿದ ಬೆನ್ನಲ್ಲೇ ಫಾರೂಖ್ ಖಾನ್ ಅವರು ಈ ಹೇಳಿಕೆ ನೀಡಿದ್ದಾರೆ.

ಭಾರತ ಸರ್ಕಾರವು ಕಾಶ್ಮೀರಿಗಳ ಮಾನವ ಹಕ್ಕುಗಳನ್ನು ಕಸಿದುಕೊಂಡಿದೆ ಎಂದು ತೀವ್ರ ಕಳವಳ ವ್ಯಕ್ತಪಡಿಸಿದರು. ಇಂಟರ್ನೆಟ್ ಸಂವಹನ ಮತ್ತು ಶಾಂತಿಯುತ ಸಭೆಗಳನ್ನು ಸ್ಥಗಿತಗೊಳಿಸಲಾಗಿದೆ ಎಂದು ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಆಯೋಗದ ಮುಖ್ಯಸ್ಥೆ ಮಿಚೆಲ್ ಬ್ಯಾಚೆಲೆಟ್ ಸೋಮವಾರ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.

ಜಮ್ಮು- ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸುವ ಕುರಿತಾಗಿ ಆಗಸ್ಟ್ 5 ರಂದು ಕೇಂದ್ರ ಸರ್ಕಾರ ನಿರ್ಧಾರ ಕೈಗೊಂಡ ಬಳಿಕ ಮುಂಜಾಗರೂಕತಾ ಕ್ರಮವಾಗಿ ಕಣಿವೆಯಲ್ಲಿ ಭಾರೀ ಭದ್ರತಾ ಸಿಬಂಧಿಯನ್ನು ನಿಯೋಜಿಸಲಾಗಿದ್ದು ಹಲವಾರು ನಿರ್ಬಂಧಗಳನ್ನು ವಿಧಿಸಲಾಗಿತ್ತು. ಅಲ್ಲದೆ ರಾಜಕೀಯ ಪಕ್ಷದ ಪ್ರಮುಖ ಮುಖಂಡರಾದ ಫಾರೂಕ್ ಅಬ್ದುಲ್ಲಾ, ಉಮ್ಮರ್ ಅಬ್ದುಲ್ಲಾ, ಮೆಹಬೂಬಾ ಮುಫ್ತಿ ಸೇರಿದಂತೆ ಪ್ರತ್ಯೇಕತಾವಾದಿ ನಾಯಕರುಗಳನ್ನು ಗೃಹ ಬಂಧನದಲ್ಲಿಡಲಾಗಿದೆ.

SCROLL FOR NEXT