ದೇಶ

ಕೊರೋನಾ ವಾರಿಯರ್ಸ್ ಮೇಲೆ ಹಲ್ಲೆ ನಡೆಸಿದರೆ 7 ವರ್ಷ ಜೈಲು: ಕೇಂದ್ರದಿಂದ ಸುಗ್ರೀವಾಜ್ಞೆ

Lingaraj Badiger

ನವದೆಹಲಿ: ದೇಶಾದ್ಯಂತ ಮಹಾಮಾರಿ ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿದ್ದು, ಅದರ ವಿರುದ್ಧ ಹೋರಾಡುತ್ತಿರುವ ಆರೋಗ್ಯ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸುವವರಿಗೆ ಏಳು ವರ್ಷ ಜೈಲು ಶಿಕ್ಷೆ ವಿಧಿಸುವ ಸಂಬಂಧ ಕೇಂದ್ರ ಸರ್ಕಾರ ಬುಧವಾರ ಸುಗ್ರೀವಾಜ್ಞೆ ಹೊರಡಿಸಿದೆ.

ಈ ಮಹತ್ವದ ಸುಗ್ರೀವಾಜ್ಞೆಗೆ ಇಂದು ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿದೆ ಎಂದು ಕೇಂದ್ರ ಸಚಿವ ಪ್ರಕಾಶ್ ಜಾವೇಡಕರ್ ಅವರು ಸುದ್ದಿಗಾರರಿಗೆ ತಿಳಿಸಿದ್ದಾರೆ.

ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಜಾವೇಡಕರ್ ಅವರು, ವೈದ್ಯರು ಮತ್ತು ಆರೋಗ್ಯ ಕಾರ್ಯಕರ್ತರು ಸಾಂಕ್ರಾಮಿಕ ರೋಗದಿಂದ ದೇಶವನ್ನು ರಕ್ಷಿಸಲು ಶ್ರಮಿಸುತ್ತಿದ್ದಾರೆ. ಅವರ ಮೇಲೆ ಹಲ್ಲೆ ನಡೆಸುವುದು ಮತ್ತು ಕಿರುಕುಳ ನೀಡುವುದನ್ನು ಸಹಿಸಲು ಸಾಧ್ಯವಿಲ್ಲ. ಈ ಸಂಬಂಧ ಸುಗ್ರೀವಾಜ್ಞೆ ಜಾರಿಗೊಳಿಸಲಾಗಿದ್ದು, ಇದರಲ್ಲಿ ಕೊರೋನಾ ವಾರಿಯರ್ಸ್ ಮೇಲೆ ಹಲ್ಲೆ ನಡೆಸುವವರಿಗೆ 6 ತಿಂಗಳಿಂದ 7 ವರ್ಷ ಜೈಲು ಶಿಕ್ಷೆ ನೀಡಲು ಅವಕಾಶವಿದೆ ಎಂದು ಹೇಳಿದ್ದಾರೆ.

ಈ ಸುಗ್ರೀವಾಜ್ಞೆಗೆ ರಾಷ್ಟ್ರಪತಿಗಳ ಅಂಕಿತ ದೊರೆತ ಕೂಡಲೇ ಇದು ಜಾರಿಗೆ ಬರಲಿದೆ. 1987ರ ಸಾಂಕ್ರಾಮಿಕ ರೋಗಗಳ ಕಾಯ್ದೆಗೆ ತಿದ್ದುಪಡಿ ತರಲಾಗಿದ್ದು ಸುಗ್ರೀವಾಜ್ಞೆ ಮೂಲಕ ಜಾರಿಗೆ ತರಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಈ ಮುಂಚೆ ಆರೋಗ್ಯ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದರೆ ಕೇವಲ 6 ತಿಂಗಳು ಜೈಲು ಶಿಕ್ಷೆ ವಿಧಿಸಲು ಅವಕಾಶವಿತ್ತು. ಈಗ ಕೇಂದ್ರ ಸರ್ಕಾರ ತಪ್ಪಿತಸ್ಥರಿಗೆ ಶಿಕ್ಷೆಯ ಪ್ರಮಾಣವನ್ನು 6 ತಿಂಗಳಿಂದ 7 ವರ್ಷಕ್ಕೆ ವಿಸ್ತರಿಸಿ ಆದೇಶಿಸಿದೆ.

SCROLL FOR NEXT