ನವದೆಹಲಿ: ಮಾರಕ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ದೇಶದಲ್ಲಿ ಗಣನೀಯವಾಗಿ ಏರಿಕೆಯಾಗುತ್ತಿರುವಂತೆಯೇ ಇತ್ತ ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ 24 ಗಂಟೆಗಳಲ್ಲಿ ದೇಶಾದ್ಯಂತ 4,63,172 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಮಾಹಿತಿ ನೀಡಿದೆ.
ಈ ಬಗ್ಗೆ ಐಸಿಎಂಆರ್ ಮಾಹಿತಿ ನೀಡಿದ್ದು, ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 5,25,689 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದ್ದು, ಆ ಮೂಲಕ ದೇಶದಲ್ಲಿ ಈ ವರೆಗೂ ಅಂದರೆ ಆಗಸ್ಟ್ 2ರವರೆಗೂ 1,98,21,831 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಮಾಹಿತಿ ನೀಡಿದೆ.
ಭಾರತದಲ್ಲಿ ಕೊರೋನಾ ಆರ್ಭಟ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 54,736 ಮಂದಿಯಲ್ಲಿ ವೈರಸ್ ಪತ್ತೆಯಾಗಿದೆ. ಇದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 17,50,724ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಭಾನುವಾರ ಮಾಹಿತಿ ನೀಡಿದೆ.
ಇನ್ನು ನಿನ್ನೆ ಒಂದೇ ದಿನ 853 ಮಂದಿ ಮಹಾಮಾರಿ ವೈರಸ್'ಗೆ ಬಲಿಯಾಗಿದ್ದು, ಇದರೊಂದಿಗೆ ದೇಶದಲ್ಲಿ ಈ ವರೆಗೂ ಸಾವನ್ನಪ್ಪಿದವರ ಸಂಖ್ಯೆ 37,364ಕ್ಕೆ ಏರಿಕೆಯಾಗಿದೆ. 17,50,724 ಮಂದಿ ಸೋಂಕಿತರ ಪೈಕಿ 11,45,630 ಮಂದಿ ಗುಣಮುಖರಾಗಿದ್ದು, ದೇಶದಲ್ಲಿನ್ನೂ 5,67,730 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆಂದು ತಿಳಿದುಬಂದಿದೆ.
ಇನ್ನು ದೇಶದಲ್ಲಿ ಸೋಂಕಿತರ ಸಾವಿನ ಪ್ರಮಾಣ ಶೇ.3.16ರಷ್ಟು ತಲುಪಿದ್ದಾರೆ, ಗುಣಮುಖರಾಗುತ್ತಿರುವ ಪ್ರಮಾಣ ಶೇ.65.44ರಷ್ಟಿದೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.