ದೇಶ

ದೇಶದಲ್ಲಿ ಪ್ರಜಾಪ್ರಭುತ್ವ ಇಲ್ಲ, ಅದು ಕಲ್ಪನೆಯಲ್ಲಿ ಮಾತ್ರ ಇದೆ: ಮೋದಿ ಸರ್ಕಾರದ ವಿರುದ್ಧ ರಾಹುಲ್ ವಾಗ್ದಾಳಿ

Lingaraj Badiger

ನವದೆಹಲಿ: "ದೇಶದಲ್ಲಿ ಪ್ರಜಾಪ್ರಭುತ್ವ ಇಲ್ಲ" ಮತ್ತು ಅದು "ಕಲ್ಪನೆಯಲ್ಲಿ ಮಾತ್ರ" ಅಸ್ತಿತ್ವದಲ್ಲಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ರಾಹುಲ್ ಗಾಂಧಿ ನೇತೃತ್ವದ ಕಾಂಗ್ರೆಸ್ ನಿಯೋಗ ಇಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಭೇಟಿ ಮಾಡಿ, ಮೂರು ಹೊಸ ಕೃಷಿ ಕಾನೂನುಗಳನ್ನು ರದ್ದುಗೊಳಿಸುವಂತೆ ಹಾಗೂ ಸಂಸತ್ ಜಂಟಿ ಅಧಿವೇಶನ ಕರೆಯುವಂತೆ ಮನವಿ ಸಲ್ಲಿಸಿದರು.

ಬಳಿಕ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ಪ್ರಧಾನಿ ಮೋದಿ ಅವರು ಈ ಕಾನೂನುಗಳನ್ನು ರದ್ದು ಮಾಡದಿದ್ದರೆ ದೇಶಕ್ಕೆ ತೊಂದರೆಯಾಗುತ್ತದೆ ಎಂದರು.

"ಹೊಸ ಕೃಷಿ ಕಾನೂನುಗಳು ರೈತ ವಿರೋಧಿಯಾಗಿವೆ ಎಂದು ನಾವು ರಾಷ್ಟ್ರಪತಿಗಳಿಗೆ ತಿಳಿಸಿದ್ದೇವೆ. ಇದರಿಂದ ರೈತರು ಮತ್ತು ಕಾರ್ಮಿಕರು ತೊಂದರೆ ಅನುಭವಿಸುತ್ತಾರೆ. ಈ ಕಾನೂನುಗಳು ರೈತರ ಪರವಾಗಿದೆ ಎಂದು ಸರ್ಕಾರ ಹೇಳಿದೆ, ಆದರೆ ಇಡೀ ದೇಶದ ರೈತರು ಈ ಕಾನೂನುಗಳನ್ನು ವಿರೋಧಿಸುತ್ತಿದ್ದಾರೆ" ಎಂದು ರಾಹುಲ್ ಗಾಂಧಿ ಹೇಳಿದರು.

ಹೊಸ ಕೃಷಿ ಕಾನೂನುಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ದೆಹಲಿಯ ಗಡಿಭಾಗದಲ್ಲಿ ಕಳೆದ 27 ದಿನಗಳಿಂದ ರೈತರು ಪ್ರತಿಭಟನೆ ನಡೆಸುತ್ತಿದ್ದು, ರಾಷ್ಟ್ರಪತಿಗಳು ಮಧ್ಯೆ ಪ್ರವೇಶಿಸಿ, ಸಮಸ್ಯೆ ಪರಿಹರಿಸಬೇಕು ಎಂದು ಒತ್ತಾಯಿಸಿ ಸುಮಾರು 2 ಕೋಟಿ ಜನರ ಸಹಿ ಹೊಂದಿರುವ ಮನವಿ ಪತ್ರಗಳನ್ನು ಕಾಂಗ್ರೆಸ್ ನಿಯೋಗ ರಾಮನಾಥ್ ಕೋವಿಂದ್ ಅವರಿಗೆ ಸಲ್ಲಿಸಿದೆ.

SCROLL FOR NEXT