ದೇಶ

ಚೆನ್ನೈ: ನೆಲ್ಲೈ ಕಣ್ಣನ್ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ, ಎಚ್ ರಾಜ ಸೇರಿ 150 ಬಿಜೆಪಿ ನಾಯಕರ ವಶಕ್ಕೆ

Lingaraj Badiger

ಚೆನ್ನೈ: ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಹತ್ಯೆ ಮಾಡಬೇಕೆಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ತಮಿಳು ವಿಚಾರವಾದಿ ನೆಲ್ಲೈ ಕಣ್ಣನ್ ಅವರನ್ನು ಬಂಧಿಸಬೇಕು ಎಂದು ಒತ್ತಾಯಿಸಿ ಮರೀನಾ ಬೀಚ್ ನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಬಿಜೆಪಿ ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮರೀನಾ ಬೀಚ್ ಮಹಾತ್ಮ ಗಾಂಧಿ ಪ್ರತಿಮೆ ಬಳಿ ಧರಣಿ ನಡೆಸುತ್ತಿದ್ದ ಬಿಜೆಪಿ ನಾಯಕರಾದ ಎಚ್ ರಾಜ, ಪೊನ ರಾಧಾಕೃಷ್ಣನ್, ಎಲ್ ಗಣೇಶನ್ ಮತ್ತು ಸಿಪಿ ರಾಧಾಕೃಷ್ಣನ್ ಸೇರಿದಂತೆ 150ಕ್ಕೂ ಹೆಚ್ಚು ಬಿಜೆಪಿ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಬಳಿಕ ಬಿಡುಗಡೆ ಮಾಡುವ ಸಾಧ್ಯತೆ ಇದೆ.

ಪ್ರಧಾನಿ ಮೋದಿ ಹಾಗೂ ಅಮಿತ್ ಶಾ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ನೆಲ್ಲೈ ಕಣ್ಣನ್ ಅವರನ್ನು ಈ ಕೂಡಲೇ ಬಂಧಿಸಬೇಕು ಎಂದು ಬಿಜೆಪಿ ನಾಯಕರು ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.

ಮರೀನಾ ಬೀಚ್ ಸುತ್ತಮುತ್ತ ಪ್ರತಿಭಟನೆ ನಡೆಸಲು ಬಿಜೆಪಿ ನಾಯಕರಿಗೆ ಅನುಮತಿ ಪಡೆದಿರಲಿಲ್ಲ. ಅನುಮತಿ ಪಡೆಯದೇ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಅವರನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಳೆದ ಸೋಮವಾರ ಪೌರತ್ವ ಕಾಯ್ದೆ ವಿರೋಧಿಸಿ ಎಸ್‌ಡಿಪಿಐ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮಾತನಾಡಿದ ತಮಿಳು ವಿಚಾರವಾದಿ ಕಣ್ಣನ್ ಅವರು, ಅಮಿತ್‌ ಶಾ ಅವರು ಪ್ರಧಾನಿ ಮೋದಿ ಅವರ ಮೆದುಳಿನಂತೆ ಕಾರ್ಯನಿರ್ವಹಿಸುತ್ತಿದ್ದಾರೆ. ಅವರನ್ನು ಮುಗಿಸಿದರೆ, ಮೋದಿ ಕಥೆಯೂ ಮುಗಿದಂತೆ ಎಂದು ಹೇಳಿದ್ದರು.

SCROLL FOR NEXT