ದೇಶ

ಸಿಎಎ ವಿರೋಧಿ ಪ್ರತಿಭಟನೆಗೆ ಕುಮ್ಮಕ್ಕು ; ಪಿ.ಎಫ್.ಐ. ನಿಷೇಧಕ್ಕೆ ಯೋಗಿ ಸರ್ಕಾರ ಶಿಫಾರಸು

Srinivasamurthy VN

ಲಖನೌ: ಇತ್ತೀಚೆಗೆ ಉತ್ತರ ಪ್ರದೇಶದಲ್ಲಿ ನಡೆದ ಪೌರತ್ವ ತಿದ್ದುಪಡಿ ವಿರೋಧಿ ಪ್ರತಿಭಟನೆ ವೇಳೆ ನಡೆದ ಹಿಂಸಾಚಾರಕ್ಕೆ ಕುಮ್ಮಕ್ಕು ನೀಡಿದ ಆರೋಪದ ಮೇರೆಗೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿ.ಎಫ್.ಐ.) ಸಂಘಟನೆಯನ್ನು ನಿಷೇಧಿಸುವಂತೆ ಸಿಎಂ ಯೋಗಿ ಆದಿತ್ಯಾನಾಥ್ ಸರ್ಕಾರ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದೆ.

ಈ ಕುರಿತಂತೆ ಯೋಗಿ ಸರ್ಕಾರ ಕೇಂದ್ರ ಗೃಹ ಇಲಾಖೆಗೆ ಪತ್ರ ಬರೆದಿದ್ದು, ರಾಜ್ಯಾದ್ಯಂತ ಇತ್ತೀಚೆಗೆ ನಡೆದಿದ್ದ ಪ್ರತಿಭಟನೆಗಳ ಸಂದರ್ಭದಲ್ಲಿ ಹಿಂಸಾಚಾರಗಳು ನಡೆದಿದ್ದು ಇದಕ್ಕೆ ಕುಮ್ಮಕ್ಕು ನೀಡಿದ ಕಾರಣಕ್ಕೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿ.ಎಫ್.ಐ.) ಸಂಘಟನೆಯನ್ನು ನಿಷೇಧಿಸುವಂತೆ ಆಗ್ರಹಿಸಿದೆ. 

ಇನ್ನು ಯೋಗಿ ಸರ್ಕಾರ ತನಗೆ ಕಳುಹಿಸಿರುವ ಪತ್ರದ ಆಧಾರದಲ್ಲಿ ಕೇಂದ್ರ ಗೃಹ ಇಲಾಖೆಯು ಕಾನೂನು ಅಭಿಪ್ರಾಯವನ್ನು ಪಡೆದುಕೊಂಡು ಮುಂದಿನ ತೀರ್ಮಾನವನ್ನು ಕೈಗೊಳ್ಳುವ ಸಾಧ್ಯತೆಗಳಿವೆ ಎಂದು ಹೇಳಲಾಗಿದೆ. ಅಂತೆಯೇ ಉತ್ತರ ಪ್ರದೇಶದಲ್ಲಿ ನಡೆದಿರುವ ಹಿಂಸಾಚಾರ ಘಟನೆಗಳಿಗೆ ಸಂಬಂಧಿಸಿದಂತೆ ಕೇಂದ್ರ ಗೃಹ ಇಲಾಖೆಯು ಗುಪ್ತಚರ ಇಲಾಖೆ ಮತ್ತು ಎನ್.ಐ.ಎ. ಸೇರಿದಂತೆ ಕೇಂದ್ರ ಸರಕಾರ ಸಂಸ್ಥೆಗಳಿಂದ ಮಾಹಿತಿ ಪಡೆಯಲು ನಿರ್ಧರಿಸಿದೆ. 

ಇತ್ತೀಚೆಗಷ್ಟೇ ಉತ್ತರ ಪ್ರದೇಶದ ಪೊಲೀಸ್ ಮಹಾ ನಿರ್ದೇಶಕರಾಗಿರುವ ಒ.ಪಿ.ಸಿಂಗ್ ಅವರು ಪಿ.ಎಫ್.ಐ. ಸಂಘಟನೆಯನ್ನು ನಿಷೇಧಿಸುವಂತೆ ರಾಜ್ಯ ಗೃಹ ಇಲಾಖೆಗೆ ಪತ್ರವನ್ನು ಬರೆದಿದ್ದರು.

SCROLL FOR NEXT