ದೇಶ

ಮಹಾ ಸಂಪುಟ: ಖಾತೆ ಹಂಚಿಕೆ ವಿಚಾರದಲ್ಲಿ ಕಾಂಗ್ರೆಸ್ ನಲ್ಲಿ ಅಸಮಾಧಾನ ಭುಗಿಲು

Nagaraja AB

ಮುಂಬೈ: ಉದ್ದವ್ ಠಾಕ್ರೆ ಸಂಪುಟದಲ್ಲಿ ಖಾತೆ ಹಂಚಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ನಲ್ಲಿ ಅಸಮಾಧಾನ ಭುಗಿಲೆದಿದ್ದು, ಮಹಾರಾಷ್ಟ್ರ ಕಾಂಗ್ರೆಸ್ ಘಟಕದ ಅಧ್ಯಕ್ಷ ಬಾಳಾ ಸಾಹೇಬ್ ಥೋರಟ್ ಅವರನ್ನು ಕೆಲ ನಾಯಕರು ದೂಷಿಸುತ್ತಿದ್ದಾರೆ.

ಮೈತ್ರಿ ಸರ್ಕಾರ ರಚನೆಯಲ್ಲಿ ಪ್ರಮುಖ ಪಾತ್ರ ವಹಿಸಿದ ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ವಿರುದ್ದವೂ  ಕೆಲ ಕಾಂಗ್ರೆಸ್ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದು, ಮಠಾಠ ಪ್ರಬಲ ನಾಯಕರೊಂದಿಗೆ ಸಮನಾಗಿ ನಿಲ್ಲುವಂತಹ ನಾಯಕ ನಮ್ಮಲ್ಲೂ ಬೇಕು ಎಂದು ಕಾಂಗ್ರೆಸ್ ನಾಯಕರು ಹೇಳುತ್ತಿದ್ದಾರೆ.

ಕೃಷಿ, ಗ್ರಾಮೀಣಾಭಿವೃದ್ಧಿ, ಕೈಗಾರಿಕೆ, ವಸತಿ, ಸಾರಿಗೆ ಮತ್ತು ಸಹಕಾರದಂತಹ ಖಾತೆಗಳಲ್ಲಿ ಕನಿಷ್ಠ ಎರಡು ಖಾತೆಗಳನ್ನಾದರೂ  ತಮಗೆ ನೀಡಬೇಕು ಎಂದು ಕೆಲ ಕಾಂಗ್ರೆಸ್ ನಾಯಕರು ಪಟ್ಟು ಹಿಡಿದಿದ್ದಾರೆ. ಆದರೆ, ಶಿವಸೇನಾ ಹಾಗೂ ಎನ್ ಸಿಪಿ ಇದಕ್ಕೆ ಸೊಪ್ಪು ಹಾಕುತ್ತಿಲ್ಲ. ಬದಲಿಗೆ ಆರಂಭದಲ್ಲಿ ಶಿವಸೇನೆ ಹೊಂದಿದ್ದ  ಸಂಸ್ಕೃತಿ, ಬಂದರು ಅಭಿವೃದ್ಧಿ ಖಾತೆಯನ್ನು ಕಾಂಗ್ರೆಸ್ ಗೆ ನೀಡಲಾಗಿದೆ. 

ಅಧಿಕಾರ ಹಂಚಿಕೆಗೆ ಸಂಬಂಧಿಸಿದಂತೆ ಮೈತ್ರಿ ಪಕ್ಷಗಳ ನಡುವಿನ ಚರ್ಚೆ ವೇಳೆಯಲ್ಲಿ ಕಾಂಗ್ರೆಸ್ ಹಿತಾಸಕ್ತಿಯನ್ನು  ಸರಿಯಾಗಿ ಮನವರಿಕೆ ಮಾಡುವಲ್ಲಿ ಬಾಳಾ ಸಾಹೇಬ್ ಥೋರಟ್ ವಿಫಲರಾಗಿದ್ದಾರೆ ಎಂದು ಪಕ್ಷದ ಹಿರಿಯ ನಾಯಕರೊಬ್ಬರು ಸುದ್ದಿಸಂಸ್ಥೆಯೊಂದಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಪಿಡಬ್ಯ್ಲೂ ಖಾತೆಯನ್ನು ಮಾಜಿ ಮುಖ್ಯಮಂತ್ರಿ ಅಶೋಕ್ ಚಾವ್ಹಾಣ್ ಹಾಗೂ ಕಂದಾಯ ಇಲಾಖೆಯನ್ನು ಥೋರಟ್ ಅವರಿಗೆ ನೀಡಿರುವುದಕ್ಕೆ ಕಾಂಗ್ರೆಸ್ ನಾಯಕ ನಿತಿನ್ ರಾವತ್ ಅಸಮಾಧಾನಗೊಂಡಿದ್ದಾರೆ ಎಂಬುದು ಮೂಲಗಳಿಂದ ತಿಳಿದುಬಂದಿದೆ. 

ಸಂಪುಟದಲ್ಲಿ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಶಾಸಕ ಸಂಗ್ರಮ್ ಥೋಪ್ಟೆ ಅವರ ಬೆಂಬಲಿಗರು ಡಿಸೆಂಬರ್ 31 ರಂದು ಸಿಎಎ ವಿರುದ್ಧ ಪುಣೆಯಲ್ಲಿ ನಡೆದ ಪ್ರತಿಭಟನೆಯಿಂದ ದೂರ ಉಳಿದಿದ್ದರು ಎಂದು ಕೆಲವರು ಆರೋಪಿಸುತ್ತಾರೆ.     

ಶಾಸಕ ಪ್ರಣಿತಿ ಶಿಂಧೆ ಅವರಿಗೆ ಸಂಪುಟದಲ್ಲಿ ಸ್ಥಾನ ಸಿಗದಿರುವುದಕ್ಕೆ ಅಸಮಾಧಾನಗೊಂಡ ಕೆಲ ಕಾಂಗ್ರೆಸ್ ಕಾರ್ಯಕರ್ತರು ಸೊಲ್ಲಾಪುರದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಮಹಾರಾಷ್ಟ್ರ ಉಸ್ತುವಾರಿ ಮಲ್ಲಿಕಾರ್ಜುನ ಖರ್ಗೆ ಅವರ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಮಧ್ಯೆ ಪಕ್ಷದಲ್ಲಿ ಶಿಸ್ತು ಇಲ್ಲ ಎಂದು ಆರೋಪಿಸಿ ಕೆಲ ಹಿರಿಯ ನಾಯಕರು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ. ಸಿ. ವೇಣುಗೋಪಾಲ್ ಅವರಿಗೆ ಪತ್ರ ಬರೆದಿದ್ದಾರೆ.ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರೊಂದಿಗೆ ಚರ್ಚಿಸಿದ ಬಳಿಕ ಪಕ್ಷ ನಿರ್ಧಾರ ಕೈಗೊಳ್ಳುವುದಕ್ಕೆ ಅನೇಕ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಅಸಮಾಧಾನ ವ್ಯಕ್ತಪಡಿಸಿದ್ದು, ಇದು ಅತ್ಯಂತ ಅಪಾಯಕಾರಿಯಾಗಲಿದೆ ಎಂದು ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

SCROLL FOR NEXT