ದೇಶ

ಆಂಧ್ರದಲ್ಲಿ ಬಿಜೆಪಿ ಜತೆ ಕೈಜೋಡಿಸಿದ ಪವನ್ ಕಲ್ಯಾಣ್ ನೇತೃತ್ವದ ಜನ ಸೇನಾ

Lingaraj Badiger

ವಿಜಯವಾಡ: ಆಂಧ್ರ ಪ್ರದೇಶದಲ್ಲಿ ಬಿಜೆಪಿ ಮತ್ತು ಟಾಲಿವುಡ್ ಪವರ್ ಸ್ಟಾರ್ ಪವನ್ ಕಲ್ಯಾಣ್ ನೇತೃತ್ವದ ಜನ ಸೇನಾ ಮೈತ್ರಿ ಮಾಡಿಕೊಂಡಿದ್ದು, 2024ರ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಮೈತ್ರಿ ಸರ್ಕಾರ ರಚಿಸುವ ಗುರಿ ಹೊಂದಲಾಗಿದೆ.

ಜನ ಸೇನಾ ಮುಖ್ಯಸ್ಥ ಪವನ್ ಕಲ್ಯಾಣ್ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಕಣ್ಣ ಲಕ್ಷ್ಮಿನಾರಾಯಣ ಅವರು ಇಂದು ವಿಜಯವಾಡದಲ್ಲಿ ಜಂಟಿ ಪತ್ರಿಕಾಗೋಷ್ಠಿ ನಡೆಸಿ, ರಾಜ್ಯದಲ್ಲಿ ಉಭಯ ಪಕ್ಷಗಳು ಮೈತ್ರಿ ಮಾಡಿಕೊಂಡಿರುವುದಾಗಿ ಘೋಷಿಸಿದರು.

2014ರಲ್ಲಿ ಸ್ಥಾಪನೆಯಾದ ಜನ ಸೇನಾ, ಬಿಜೆಪಿಯೊಂದಿಗೆ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಂಡಿತ್ತು. ಆದರೆ ಚುನಾವಣೆಗೆ ಸ್ಪರ್ಧಿಸಲಿಲ್ಲ. 2019ರ ಚುನಾವಣೆಯಲ್ಲಿ ಬಿಜೆಪಿಯಿಂದ ದೂರ ಉಳಿದ ಜನ ಸೇನಾ, ಎಡಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಂಡು ಚುನಾವಣೆಗೆ ಸ್ಪರ್ಧಿಸಿ, ಕೇವಲ ಒಂದು ಸ್ಥಾನದಲ್ಲಿ ಮಾತ್ರ ಗೆಲುವು ಸಾಧಿಸಿತು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪವನ್ ಕಲ್ಯಾಣ್ ಅವರು, ಸಂವಹನ ತೊಂದರೆಯಿಂದ ಇಷ್ಟು ದಿನ ಮೈತ್ರಿ ಸಾಧ್ಯವಾಗಿರಲಿಲ್ಲ. ಈಗ ಅಂಧ್ರ ಪ್ರದೇಶದ ಭವಿಷ್ಯಕ್ಕಾಗಿ ಜನ ಸೇನಾ, ಬಿಜೆಪಿಯೋಂದಿಗೆ ಯಾವುದೇ ಷರತ್ತುಗಳಿಲ್ಲದೆ ಮೈತ್ರಿ ಮಾಡಿಕೊಂಡಿದೆ. ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ಮಾರ್ಗದರ್ಶನದ ಅಗತ್ಯ ಇದೆ ಎಂದರು.

ಮುಂಬರುವ ಸ್ಥಳೀಯ ಮತ್ತು 2024ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಮತ್ತು ಜನ ಸೇನಾ ಮೈತ್ರಿ ಸ್ಪರ್ಧಿಸಲಿದೆ ಮತ್ತು ನಮ್ಮ ಮೈತ್ರಿ 2024ರಲ್ಲಿ ರಾಜ್ಯದಲ್ಲಿ ಸರ್ಕಾರ ರಚಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

SCROLL FOR NEXT