ಜೂನ್ 20ರಂದು ಗರೀಬ್ ಕಲ್ಯಾಣ್ ರೋಜ್ ಗಾರ್ ಯೋಜನೆಗೆ ಪಿಎಂ ಮೋದಿ ಚಾಲನೆ
ಪ್ರಧಾನ ಮಂತ್ರಿ ನರೇಂದ್ರ ಮೋದಿ ಇದೇ 20ರಂದು ಗರೀಬ್ ಕಲ್ಯಾಣ್ ರೋಜ್ ಗಾರ್ ಅಭಿಯಾನಕ್ಕೆ ಬಿಹಾರದಲ್ಲಿ ಚಾಲನೆ ನೀಡಲಿದ್ದಾರೆ.
ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಇದೇ 20ರಂದು ಗರೀಬ್ ಕಲ್ಯಾಣ್ ರೋಜ್ ಗಾರ್ ಅಭಿಯಾನಕ್ಕೆ ಬಿಹಾರದಲ್ಲಿ ಚಾಲನೆ ನೀಡಲಿದ್ದಾರೆ.
ಕೊರೋನಾ ಸಂಕಷ್ಟದಿಂದ ಕೆಲಸವಿಲ್ಲದೆ ತಮ್ಮೂರಿಗೆ ಮರಳಿದ 6 ರಾಜ್ಯಗಳ ವಲಸೆ ಕಾರ್ಮಿಕರು ಮತ್ತು ಗ್ರಾಮೀಣ ಭಾಗದ ಜನರ ಜೀವನೋಪಾಯಕ್ಕಾಗಿ ಇರುವ ಯೋಜನೆ ಇದಾಗಿದೆ.
ಈ ಬೃಹತ್ ಗ್ರಾಮೀಣ ಜನಹಿತಕಾರಿ ಯೋಜನೆಯು ವಲಸೆ ಕಾರ್ಮಿಕರು ಮತ್ತು ಗ್ರಾಮೀಣ ನಾಗರಿಕರಿಗೆ ಜೀವನೋಪಾಯದ ಅವಕಾಶಗಳನ್ನು ಒದಗಿಸುತ್ತದೆ. 125 ದಿನಗಳ ಈ ಅಭಿಯಾನವು ಹಂತ ಹಂತಗಳಲ್ಲಿ ಕಾರ್ಯನಿರ್ವಹಿಸಲಿದ್ದು, ವಲಸೆ ಕಾರ್ಮಿಕರಿಗೆ ಒಂದು ಕಡೆ ಉದ್ಯೋಗ ಒದಗಿಸಲು ಮತ್ತು ಮತ್ತೊಂದೆಡೆ ದೇಶದ ಗ್ರಾಮೀಣ ಪ್ರದೇಶಗಳಲ್ಲಿ ಮೂಲಸೌಕರ್ಯಗಳನ್ನು ಸೃಷ್ಟಿಸಲು 25 ಬಗೆಯ ವಿವಿಧ ಕೆಲಸಗಳನ್ನು ಒಳಗೊಂಡಿರುತ್ತದೆ. ಇದಕ್ಕಾಗಿ ಕೇಂದ್ರ ಸರ್ಕಾರ 50,000 ಕೋಟಿ ರೂಪಾಯಿ ಮೀಸಲಿಟ್ಟಿದೆ.
ಬಿಹಾರ ರಾಜ್ಯದ ಖಗಾರಿಯಾ ಜಿಲ್ಲೆಯ ತೆಲಿಹಾರ್ ಗ್ರಾಮದಲ್ಲಿ ವಿಡಿಯೊ ಕಾನ್ಫರೆನ್ಸ್ ಮೂಲಕ ಪ್ರಧಾನಿ ಮೋದಿ ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ. ಈ ಸಂದರ್ಭದಲ್ಲಿ ಬಿಹಾರ ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ಹಾಜರಿರುತ್ತಾರೆ.
ಬಿಹಾರ, ಉತ್ತರ ಪ್ರದೇಶ, ಮಧ್ಯ ಪ್ರದೇಶ, ರಾಜಸ್ತಾನ, ಜಾರ್ಖಂಡ್ ಮತ್ತು ಒಡಿಶಾ ರಾಜ್ಯಗಳ ಗ್ರಾಮೀಣ ಭಾಗದ ಬಡವರು ಮತ್ತು ವಲಸೆ ಕಾರ್ಮಿಕರಿಗೆ ಇರುವ ಯೋಜನೆ ಇದಾಗಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.