ದೇಶ

ಕೊರೋನಾ ನಿಯಂತ್ರಣ: ರಾಜ್ಯದ ಕ್ರಮಗಳಿಗೆ ಕೇಂದ್ರ ಮೆಚ್ಚುಗೆ, ಕರ್ನಾಟಕ ಮಾದರಿ ಅನುಸರಿಸಲು ಇತರೆ ರಾಜ್ಯಗಳಿಗೆ ಸೂಚನೆ

Lingaraj Badiger

ನವದೆಹಲಿ: ಮಹಾಮಾರಿ ಕೊರೋನಾ ವೈರಸ್ ನಿಯಂತ್ರಿಸಲು ರಾಜ್ಯ ಸರ್ಕಾರ ತೆಗೆದುಕೊಂಡ ಕ್ರಮಗಳ ಬಗ್ಗೆ ಕೇಂದ್ರ ಸರ್ಕಾರ ಮೆಚ್ಚುಗೆ ವ್ಯಕ್ತಪಡಿಸಿದ್ದು, ಕರ್ನಾಟಕದ ಮಾದರಿ ಅನುಸರಿಸುವಂತೆ ಇತರೆ ರಾಜ್ಯಗಳಿಗೆ ಸೂಚಿಸಿದೆ.

ಕೊರೋನಾ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಮಾದರಿಯನ್ನು ಅನುಸರಿಸುವಂತೆ ಕೇಂದ್ರ ಆರೋಗ್ಯ ಸಚಿವಾಲಯ ಇತರೆ ರಾಜ್ಯ ಸರ್ಕಾರಗಳಿಗೆ ಸೂಚಿಸಿದೆ.

ಕರ್ನಾಟಕದಲ್ಲಿ ಸೋಂಕಿತರ ಸಂಪರ್ಕ ಉಳ್ಳವರನ್ನು ಶೀಘ್ರ ಪತ್ತೆ ಮಾಡುತ್ತಿರುವುದಕ್ಕೆ ಹಾಗೂ ಮನೆ–ಮನೆ ಆರೋಗ್ಯ ಸಮೀಕ್ಷೆ ಕೈಗೊಂಡಿರುವುದಕ್ಕೆ ಕೇಂದ್ರ ಸರ್ಕಾರ ಮೆಚ್ಚುಗೆ ವ್ಯಕ್ತಪಡಿಸಿದೆ. ಕೋವಿಡ್ ಹರಡುವಿಕೆ ತಡೆಗಟ್ಟುವ ಸಲುವಾಗಿ ಕರ್ನಾಟಕದಲ್ಲಿ ಈಗಾಗಲೇ 1.5 ಕೋಟಿಗೂ ಹೆಚ್ಚು ಮಂದಿಯ ಸಮೀಕ್ಷೆ ನಡೆಸಲಾಗಿದೆ ಎಂದು ಆರೋಗ್ಯ ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ.

ಈ ಉತ್ತಮ ಕ್ರಮಗಳನ್ನು ಸ್ಥಳೀಯ ಆದ್ಯತೆಗಳಿಗೆ ಅನುಗುಣವಾಗಿ ಅಳವಡಿಸಿಕೊಳ್ಳುವಂತೆ ಮತ್ತು ಕೋವಿಡ್ ಸಾಂಕ್ರಾಮಿಕದ ವಿರುದ್ಧದ ಹೋರಾಟದಲ್ಲಿ ಅನುಷ್ಠಾನಗೊಳಿಸುವಂತೆ ಇತರ ರಾಜ್ಯಗಳಿಗೆ ಕೇಂದ್ರ ಸರ್ಕಾರ ಸೂಚಿಸಿದೆ.

ಕರ್ನಾಟಕದಲ್ಲಿ ಸೋಂಕಿತರ ಸಂಪರ್ಕವಿದ್ದವರನ್ನು ಶೀಘ್ರ ಪತ್ತೆ ಮಾಡುವ ಕಾರ್ಯದಿಂದಾಗಿ ಆರೋಗ್ಯ ಕ್ಷೇತ್ರದ ಮೂಲಸೌಕರ್ಯಗಳ ಕೊರತೆಯಾಗದಂತೆ ನೋಡಿಕೊಳ್ಳುವುದು ಸಾಧ್ಯವಾಗುತ್ತಿದೆ ಎಂದು ಕೇಂದ್ರ ಹೇಳಿದೆ.

ಕೋವಿಡ್‌ ನಿರ್ವಹಣೆಯಲ್ಲಿ ಮೊಬೈಲ್ ಆ್ಯಪ್ ತಂತ್ರಜ್ಞಾನವನ್ನು ಪರಿಣಾಮಕಾರಿಯಾಗಿ ಬಳಸುತ್ತಿರುವುದಕ್ಕೂ ಕರ್ನಾಟಕವನ್ನು ಕೇಂದ್ರ ಸರ್ಕಾರ ಶ್ಲಾಘಿಸಿದೆ.

SCROLL FOR NEXT