ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಆಪರೇಷನ್‌ ಕಮಲ: ಬೆಂಗಳೂರಿನಲ್ಲಿರುವ ಮಧ್ಯ ಪ್ರದೇಶ ಕಾಂಗ್ರೆಸ್ ಶಾಸಕ ರಾಜೀನಾಮೆ

ಮಧ್ಯ ಪ್ರದೇಶದಲ್ಲಿ ಕಮಲ್ ನಾಥ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಪತನಗೊಳಿಸಲು ಬಿಜೆಪಿ ಆಪರೇಷನ್ ಕಮಲಕ್ಕೆ ಕೈ ಹಾಕಿದೆ ಎಂಬ ಆರೋಪಗಳ ಬೆನ್ನಲ್ಲೇ ಬೆಂಗಳೂರಿನಲ್ಲಿರುವ ಮಧ್ಯ ಪ್ರದೇಶ ಕಾಂಗ್ರೆಸ್‍ ಶಾಸಕ ಹರ್ದೀಪ್ ಸಿಂಗ್ ಅವರು ತಮ್ಮ ಶಾಸಕ ಸ್ಥಾನಕ್ಕೆ ಗುರುವಾರ ರಾಜೀನಾಮೆ ನೀಡಿದ್ದಾರೆ.

ಹರ್ದೀಪ್ ಸಿಂಗ್ ದಂಗ್
Lingaraj Badiger
Updated On : 5 Mar 2020, 11:44 pm

ಭೋಪಾಲ್: ಮಧ್ಯ ಪ್ರದೇಶದಲ್ಲಿ ಕಮಲ್ ನಾಥ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಪತನಗೊಳಿಸಲು ಬಿಜೆಪಿ ಆಪರೇಷನ್ ಕಮಲಕ್ಕೆ ಕೈ ಹಾಕಿದೆ ಎಂಬ ಆರೋಪಗಳ ಬೆನ್ನಲ್ಲೇ ಬೆಂಗಳೂರಿನಲ್ಲಿರುವ ಮಧ್ಯ ಪ್ರದೇಶ ಕಾಂಗ್ರೆಸ್‍ ಶಾಸಕ ಹರ್ದೀಪ್ ಸಿಂಗ್ ದಂಗ್ ಅವರು ತಮ್ಮ ಶಾಸಕ ಸ್ಥಾನಕ್ಕೆ ಗುರುವಾರ ರಾಜೀನಾಮೆ ನೀಡಿದ್ದಾರೆ.

ಬೆಂಗಳೂರಿನ ಹೊರವಲಯದ ಖಾಸಗಿ ಹೋಟೆಲ್‌ನಲ್ಲಿ ಮಧ್ಯ ಪ್ರದೇಶನ ನಾಲ್ವರು ಕಾಂಗ್ರೆಸ್ ಶಾಸಕರು ಬಿಡಾರ ಹೂಡಿದ್ದಾರೆ ಎಂದು ತಿಳಿದು ಬಂದಿದೆ. ಈ ನಾಲ್ವರ ಪೈಕಿ ಹರ್ದೀಪ್ ಸಿಂಗ್ ಅವರು ಸ್ಪೀಕರ್ ಗೆ ರಾಜೀನಾಮೆ ಪತ್ರ ರವಾನಿಸಿದ್ದಾರೆ. ಇದರೊಂದಿಗೆ ಮಧ್ಯಪ್ರದೇಶ ಸರ್ಕಾರದ ಮೊದಲ ವಿಕೆಟ್ ಪತನವಾಗಿದೆ.

‘ಎರಡನೇ ಬಾರಿ ಜನರಿಂದ ಆಯ್ಕೆಯಾದರೂ ಪಕ್ಷದಲ್ಲಿ ಕಡೆಗಣಿಸಲಾಗುತ್ತಿದೆ. ಪ್ರತಿಯೊಬ್ಬ ಸಚಿವರೂ ತಾವು ಭ್ರಷ್ಟಾಚಾರದ ಭಾಗವಾಗಿ ಕೆಲಸ ಮಾಡುತ್ತಿದ್ದಾರೆ’ ಎಂದು ಕಾಂಗ್ರೆಸ್ ಶಾಸಕ ಪತ್ರದಲ್ಲಿ ಆರೋಪಿಸಿದ್ದಾರೆ.

Advertisement

Advertisement

ಬೆಂಗಳೂರಿನಲ್ಲಿರುವ ಮಧ್ಯ ಪ್ರದೇಶದ ನಾಲ್ವರು ಕಾಂಗ್ರೆಸ್‌ ಶಾಸಕರು ರಾಜ್ಯ ಬಿಜೆಪಿಯ ಪ್ರಭಾವಿ ಶಾಸಕರೊಬ್ಬರ ಆತಿಥ್ಯದಲ್ಲಿ ಇದ್ದಾರೆ. ಇನ್ನೂ ಕೆಲವು ಶಾಸಕರು ಈ ಗುಂಪನ್ನು ಸೇರಿಕೊಳ್ಳುವ ಸಾಧ್ಯತೆಯಿದೆ ಎಂದು ತಿಳಿದು ಬಂದಿದೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ಹಿರಿಯ ಮುಖಂಡ ರಣದೀಪ್ ಸಿಂಗ್ ಸುರ್ಜೆವಾಲಾ ಅವರು, ’14 ಶಾಸಕರನ್ನು ತನ್ನ ಕಡೆ ಸೆಳೆಯಲು ಬಿಜೆಪಿ ಪ್ರಯತ್ನಿಸುತ್ತಿದೆ. 15 ವರ್ಷಗಳಿಂದ ನಡೆಯುತ್ತಿದ್ದ ಲ್ಯಾಂಡ್ ಮಾಫಿಯಾ, ಚಿಟ್ ಫಂಡ್ ಮಾಫಿಯಾ, ಸುಲಿಗೆ ಮಾಫಿಯಾಗಳನ್ನು ಕಾಂಗ್ರೆಸ್ ಸರ್ಕಾರವು ನಿಲ್ಲಿಸಿದೆ. ಹೀಗಾಗಿ ಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿ ಪಿತೂರಿ ನಡೆಸಿದೆ ಎಂದು ಆರೋಪಿಸಿದ್ದಾರೆ.

ಮಧ್ಯಪ್ರದೇಶ ಬಿಜೆಪಿ ಆಪರೇಷನ್‍ಗೆ ಒಳಗಾದ ಒಟ್ಟು 10 ಕಾಂಗ್ರೆಸ್ ಶಾಸಕರಲ್ಲಿ ಹರ್ದೀಪ್ ಸಿಂಗ್ ಕೂಡ ಒಬ್ಬರಾಗಿದ್ದಾರೆ. 12 ಮಂದಿ ಶಾಸಕರನ್ನು ಸೆಳೆದಿರುವ ಬಿಜೆಪಿ, 8 ಮಂದಿ ಶಾಸಕರು ದೆಹಲಿಗೆ ಶಿಫ್ಟ್ ಮಾಡಿದ್ದರೆ, ಮಂಗಳವಾರ ರಾತ್ರೋರಾತ್ರಿ 4 ಮಂದಿ ಶಾಸಕರು ಕರ್ನಾಟಕಕ್ಕೆ ಶಿಫ್ಟ್ ಆಗಿದ್ದರು ಎಂದು ಮೂಲಗಳಿಂದ ತಿಳಿದು ಬಂದಿದೆ.

ಬಿಜೆಪಿಯ ರಾಂಪಾಲ್ ಸಿಂಗ್, ನರೋತ್ತಮ್ ಮಿಶ್ರಾ, ಅರವಿಂದ ಬದೌರಿಯಾ ಮತ್ತು ಸಂಜಯ್ ಪಾಠಕ್ ಶಾಸಕರಿಗೆ ಹಣ ನೀಡಿದ್ದಾರೆ. ಈ ಎಲ್ಲ ಶಾಸಕರು ಕಾಂಗ್ರೆಸ್ಸಿಗೆ ಮರಳಲಿದ್ದಾರೆ ಎಂದು ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಹೇಳಿದ್ದರು. ಮುಖ್ಯಮಂತ್ರಿ ಕಮಲನಾಥ್ ಪ್ರತಿಕ್ರಿಯಿಸಿ, ನಮ್ಮ ಸರ್ಕಾರಕ್ಕೆ ಏನು ಆಗುವುದಿಲ್ಲ. ಎಲ್ಲ ಶಾಸಕರು ವಾಪಸ್ ಆಗಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದರು.

ಒಟ್ಟು 230 ವಿಧಾನಸಭಾ ಕ್ಷೇತ್ರಗಳಿರುವ ಮಧ್ಯಪ್ರದೇಶದಲ್ಲಿ 2018ರಲ್ಲಿ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ 114, ಬಿಜೆಪಿ 109, ಪಕ್ಷೇತರ 1, ಬಿಎಸ್‍ಪಿ 2, ಎಸ್‍ಪಿ 2 ಕ್ಷೇತ್ರದಲ್ಲಿ ಜಯಗಳಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement