ದೇಶ

ಅಕ್ರಮ ಹಣ ವರ್ಗಾವಣೆ ಪ್ರಕರಣ: ವಂಚನೆ ಆರೋಪದಡಿ ಯೆಸ್ ಬ್ಯಾಂಕ್ ಸಂಸ್ಥಾಪಕ ರಾಣಾ ಕಪೂರ್ ಬಂಧನ

Srinivasamurthy VN

ಮುಂಬೈ: ಯೆಸ್ ಬ್ಯಾಂಕ್ ಆರ್ಥಿಕ ಬಿಕ್ಕಟ್ಟು ವಿಚಾರಕ್ಕೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆಯ ಗಂಭೀರ ಆರೋಪ ಎದುರಿಸುತ್ತಿದ್ದ ಯೆಸ್ ಬ್ಯಾಂಕ್ ಸಂಸ್ಥಾಪಕ ರಾಣಾ ಕಪೂರ್ ಅವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

ಈ ಬಗ್ಗೆ ರಾಷ್ಟ್ರೀಯ ಸುದ್ದಿಸಂಸ್ಥೆಗಳು ವರದಿ ಮಾಡಿದ್ದು, ಸತತ 2 ದಿನಗಳ ನಿರಂತರ ವಿಚಾರಣೆ ಬಳಿಕ ಜಾರಿನಿರ್ದೇಶನಾಲಯದ ಅಧಿಕಾರಿಗಳು ರಾಣಾ ಕಪೂರ್ ರನ್ನು ಬಂಧಿಸಿದ್ದಾರೆ ಎನ್ನಲಾಗಿದೆ. 

ಇನ್ನು ನಿನ್ನೆ ರಾಣಾ ಕಪೂರ್‌ ಅವರ ಮುಂಬೈ ನಿವಾಸದಲ್ಲಿ ಶುಕ್ರವಾರ ರಾತ್ರಿ ಶೋಧ ನಡೆಸಿದ್ದ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ಶನಿವಾರವೂ ದೆಹಲಿ ಮತ್ತು ಮುಂಬೈನ ಕೆಲವು ಕಡೆಗಳಲ್ಲಿ ಶೋಧ ಕಾರ್ಯ ನಡೆಸಿದರು. ರಾಣಾ ಅವರ ಪುತ್ರಿಯರಾದ ರಾಖೀ ಕಪೂರ್‌ ಟಂಡನ್‌, ರೋಶ್ನಿ ಕಪೂರ್‌ ಮತ್ತು ರಾಧಾ ಕಪೂರ್‌ ಅವರಿಗೆ ಸೇರಿರುವ ಮನೆಗಳಲ್ಲಿಯೂ ಶೋಧ ಕಾರ್ಯ ನಡೆಸಲಾಯಿತು.

ಅಲ್ಲದೆ ಶನಿವಾರ ರಾಣಾ ಕಪೂರ್ ಅವರನ್ನುಮುಂಬೈನ ಇ.ಡಿಯ ಕಚೇರಿಗೆ ಕರೆತಂದು ಏಳು ಗಂಟೆಗಳವರೆಗೆ ವಿಚಾರಣೆಗೆ ಒಳಪಡಿಸಿ ಅವರ ಹೇಳಿಕೆಗಳನ್ನು ದಾಖಲಿಸಿ ಕೊಂಡಿದ್ದರು. ಇನ್ನು ಈ ವಿಚಾರವಾಗಿ ಮಾತನಾಡಿದ್ದ ಅಧಿಕಾರಿಯೊಬ್ಬರು, 'ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಳಿ ನಡೆಸಿದ್ದು, ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ(ಪಿಎಂಎಲ್‌ಎ) ಹೆಚ್ಚಿನ ಸಾಕ್ಷ್ಯ ಸಂಗ್ರಹಿಸಲಾಗುತ್ತಿದೆ ಎಂದು ಹೇಳಿದ್ದಾರೆ. 

ಇನ್ನು ಅಕ್ರಮ ಹಣ ವಹಿವಾಟು ತಡೆ ಕಾಯ್ದೆ(ಪಿಎಂಎಲ್‌ಎ) ಅಡಿಯಲ್ಲಿ ಕಪೂರ್ ವಿರುದ್ಧ ಈಗಾಗಲೇ ಪ್ರಕರಣ ದಾಖಲಾಗಿದ್ದು, ರಾಣಾ ಕಪೂರ್ ಅವರು ದೇಶವನ್ನು ತೊರೆಯದಂತೆ ತಡೆಯಲು ಲುಕ್ ಔಟ್ ನೋಟಿಸ್ ನೀಡಲಾಗಿದೆ.

SCROLL FOR NEXT