ದೇಶ

ಮಧ್ಯ ಪ್ರದೇಶ ಬಿಕ್ಕಟ್ಟು: ಕಾಂಗ್ರೆಸ್ ಗೆ ಜ್ಯೋತಿರಾದಿತ್ಯ ಸಿಂಧಿಯಾ ಗುಡ್ ಬೈ, 20 ಶಾಸಕರಿಂದ ರಾಜೀನಾಮೆ

Lingaraj Badiger

ಭೋಪಾಲ್: ಮಧ್ಯ ಪ್ರದೇಶದಲ್ಲಿ ಅಚ್ಚರಿಯ ರಾಜಕೀಯ ಬೆಳವಣಿಗೆಗಳು ನಡೆಯುತ್ತಿದ್ದು, ಕಮಲ್ ನಾಥ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಬಿಜೆಪಿಯ ಆಪರೇಷನ್ ಕಮಲಕ್ಕೆ ಬಲಿಯಾಗುವುದು ಬಹುತೇಕ ಖಚಿತವಾಗಿದೆ.

ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ಆಪ್ತ ಜ್ಯೋತಿರಾದಿತ್ಯ ಸಿಂಧಿಯಾ ಅವರು ಇಂದು ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ ಬೆನ್ನಲ್ಲೇ ಕಾಂಗ್ರೆಸ್ ಗೆ ಗುಡ್ ಬೈ ಹೇಳಿದ್ದಾರೆ. ಅಲ್ಲದೆ ಸಿಂಧಿಯಾ ಬೆಂಬಲಿತ 20 ಕಾಂಗ್ರೆಸ್ ಶಾಸಕರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಕಮಲ್ ನಾಥ್ ಸರ್ಕಾರ ಪತನವಾಗುವ ಸಾಧ್ಯತೆ ಇದೆ.

ಮಧ್ಯ ಪ್ರದೇಶ ಕಾಂಗ್ರೆಸ್ ನ ಆಂತರಿಕ ಕಿತ್ತಾಟ ಹಾಗೂ ಶಾಸಕರ ಕುದುರು ವ್ಯಾಪಾರದ ಆರೋಪಗಳ ಬೆನ್ನಲ್ಲೇ ಹಿರಿಯ ಕಾಂಗ್ರೆಸ್ ನಾಯಕ ಜ್ಯೋತಿರಾದಿತ್ಯ ಸಿಂಧಿಯಾ ನೇತೃತ್ವದಲ್ಲಿ 6 ಸಚಿವರು ಸೇರಿದಂತೆ 20 ಕಾಂಗ್ರೆಸ್ ಶಾಸಕರು ನಿನ್ನೆ ಬೆಂಗಳೂರಿಗೆ ಆಗಮಿಸಿದ್ದರು. ಇದರ ಬೆನ್ನಲ್ಲೇ ಇಂದು ಜ್ಯೋತಿರಾಧಿತ್ಯ ಸಿಂಧಿಯಾ ಅವರು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ರಾಜೀನಾಮೆ ಪತ್ರ ರವಾನಿಸಿದ್ದು, ರಾಜ್ಯದಲ್ಲಿ ರಾಜಕೀಯ ಅನಿಶ್ಚಿತತೆ ಎದ್ದು ಕಾಣುತ್ತಿದೆ. ಈ ಹಿನ್ನೆಲೆಯಲ್ಲಿ ನಾನು ಕೆಲಸ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ಕಾಂಗ್ರೆಸ್ ನ ಪ್ರಾಥಮಿಕ ಸದಸ್ಯತ್ವಕ್ಕೆ ರಾಜಿನಾಮೆ ನೀಡುತ್ತಿರುವುದಾಗಿ ಹೇಳಿದ್ದಾರೆ.

ಸಿಂಧಿಯಾ ರಾಜಿನಾಮೆ ಬೆನ್ನಲ್ಲೇ ಬೆಂಗಳೂರಿನಲ್ಲಿ ಉಳಿದುಕೊಂಡಿರುವ 20 ಕಾಂಗ್ರೆಸ್ ಶಾಸಕರೂ ತಮ್ಮ ಶಾಸಕ ಸ್ಥಾನಕ್ಕೆ ಹಾಗೂ ಕಾಂಗ್ರೆಸ್ ಪಕ್ಷಕ್ಕೆ ರಾಜಿನಾಮೆ ನೀಡಿದ್ದಾರೆ. ಇನ್ನು ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಹಿನ್ನಲೆಯಲ್ಲಿ ಸಿಂಧಿಯಾ ಹಾಗೂ 20 ಶಾಸಕರನ್ನು ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ.

6 ಸಚಿವರು, 14 ಕಾಂಗ್ರೆಸ್ ಶಾಸಕರು ಬೆಂಗಳೂರಿಗೆ ಬಂದು, ಮಾರತಹಳ್ಳಿಯ ಖಾಸಗಿ ಹೋಟೆಲ್‍ನಲ್ಲಿ ವಾಸ್ತವ್ಯ ಹೂಡಿದ್ದಾರೆ. ಬೆಂಗಳೂರಿಗೆ ಬಂದ ಕೈ ನಾಯಕರು ಜ್ಯೋತಿರಾದಿತ್ಯ ಸಿಂಧಿಯಾ ಬೆಂಬಲಿಗರಾಗಿದ್ದು ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ ಆಗಮಿಸಿದ್ದಾರೆ. ಈ ಎಲ್ಲ ನಾಯಕರ ಫೋನ್ ಸ್ವಿಚ್ ಆಫ್ ಆಗಿದೆ.

ಮಧ್ಯಪ್ರದೇಶದಲ್ಲಿ ಅಧಿಕಾರಕ್ಕೆ ಏರಿದ ಬಳಿಕ ಮುಖ್ಯಮಂತ್ರಿ ಪಟ್ಟದ ವಿಚಾರದಲ್ಲಿ ಕಮಲನಾಥ್ ಮತ್ತು ಜ್ಯೋತಿರಾದಿತ್ಯ ಸಿಂಧಿಯಾ ನಡುವೆ ಸ್ಪರ್ಧೆ ಏರ್ಪಟಿತ್ತು. ಕೊನೆಗೆ ಕಾಂಗ್ರೆಸ್ ಹೈಕಮಾಂಡ್ ಕಮಲನಾಥ್ ಅವರಿಗೆ ಮುಖ್ಯಮಂತ್ರಿ ಹುದ್ದೆಯನ್ನು ನೀಡಿತ್ತು.

ಮಧ್ಯ ಪ್ರದೇಶದಲ್ಲಿ ಕಾಂಗ್ರೆಸ್ ಶಾಸಕರ ಮಧ್ಯೆ 2 ಬಣಗಳಿದ್ದು 23 ನಾಯಕರು ಸಿಎಂ ಹುದ್ದೆಗೆ ಜ್ಯೋತಿರಾದಿತ್ಯ ಸಿಂಧಿಯಾ ಪರ ಬ್ಯಾಟಿಂಗ್ ಮಾಡಿದ್ದರು. ಈ ಶಾಸಕರ ಪೈಕಿ ಹಲವು ಶಾಸಕರು ಈಗ ಬೆಂಗಳೂರಿಗೆ ಆಗಮಿಸಿದ್ದಾರೆ.

SCROLL FOR NEXT