ದೇಶ

ಕೊರೋನಾ ರೋಗಿಗಳಿಗೆ ಉಚಿತ ಅಥವಾ ಕಡಿಮೆ ವೆಚ್ಚದಲ್ಲಿ ಚಿಕಿತ್ಸೆ ನೀಡುವ ಖಾಸಗಿ ಆಸ್ಪತ್ರೆಗಳನ್ನು ಗುರುತಿಸಿ: ಕೇಂದ್ರಕ್ಕೆ ಸುಪ್ರೀಂ ಸೂಚನೆ

Lingaraj Badiger

ನವದೆಹಲಿ: ಕೊವಿಡ್-19 ಸೋಂಕಿತ ರೋಗಿಗಳಿಗೆ ಉಚಿತವಾಗಿ ಅಥವಾ ಕಡಿಮೆ ವೆಚ್ಚದಲ್ಲಿ ಚಿಕಿತ್ಸೆ ಪಡೆಯಬಹುದಾದ ಖಾಸಗಿ ಆಸ್ಪತ್ರೆಗಳನ್ನು ಗುರುತಿಸುವಂತೆ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ಬುಧವಾರ ಸೂಚಿಸಿದೆ.

ದೇಶಾದ್ಯಂತದ ಖಾಸಗಿ ಆಸ್ಪತ್ರೆಗಳಲ್ಲಿ ಕೊವಿಡ್-19 ಚಿಕಿತ್ಸೆಯ ದುಬಾರಿ ವೆಚ್ಚಕ್ಕೆ ಕಡಿವಾಣ ಹಾಕಬೇಕು ಎಂದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ವಿಡಿಯೋ-ಕಾನ್ಫರೆನ್ಸಿಂಗ್ ಮೂಲಕ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎಸ್ ಎ ಬೊಬ್ಡೆ ನೇತೃತ್ವದ ನ್ಯಾಯಪೀಠ, ಹಲವು ಖಾಸಗಿ ಆಸ್ಪತ್ರೆಗಳ ನಿರ್ಮಾಣಕ್ಕೆ ಸರ್ಕಾರ ಭೂಮಿಯನ್ನು ಉಚಿತವಾಗಿ ಅಥವಾ ಅತ್ಯಂತ ಕಡಿಮೆ ದರದಲ್ಲಿ ನೀಡಲಾಗಿದೆ. ಈಗ ಅಂತಹ ಕೊರೋನಾ ವೈರಸ್ ಸೋಂಕಿತ ರೋಗಿಗಳಿಗೆ ಉಚಿತವಾಗಿ ಚಿಕಿತ್ಸೆ ನೀಡಬೇಕು ಎಂದಿದೆ.

ಆಸ್ಪತ್ರೆಗಾಗಿ ಉಚಿತ ಅಥವಾ ಕಡಿಮೆ ದರಕ್ಕೆ ಭೂಮಿ ಪಡೆದ ಚಾರಿಟೇಬಲ್ ಆಸ್ಪತ್ರೆಗಳನ್ನು ಸರ್ಕಾರ ಗುರುತಿಸಬೇಕು ಎಂದು ಸುಪ್ರೀಂ ಕೋರ್ಟ್, ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರಿಗೆ ಸೂಚಿಸಿದೆ.

ಕೇಂದ್ರ ಸರ್ಕಾರದ ಪರವಾಗಿ ವಿಚಾರಣೆಗೆ ಹಾಜರಾಗಿದ್ದ ಮೆಹ್ತಾ ಅವರು, ಈ ಸಂಬಂಧ ಕಾನೂನು ತರುವ ಬಗ್ಗೆ ಸರ್ಕಾರ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಹೇಳಿದ್ದಾರೆ.

ಕೋರ್ಟ್ ಪ್ರಕರಣದ ವಿಚಾರಣೆಯನ್ನು ಒಂದು ವಾರ ಮುಂದೂಡಿದೆ.

SCROLL FOR NEXT