ನವದೆಹಲಿ: ಮಾರಕ ಕೊರೋನಾ ವೈರಸ್ ಸೋಂಕಿಗೆ ಮತ್ತೋರ್ವ ಜನಪ್ರತಿನಿಧಿ ಬಲಿಯಾಗಿದ್ದು, ಸೋಂಕಿಗೆ ತುತ್ತಾಗಿದ್ದ ಉತ್ತರಾ ಖಂಡದ ಬಿಜೆಪಿ ಶಾಸಕ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.
ಉತ್ತರಾಖಂಡ ರಾಜ್ಯದ ಅಲ್ಮೋರಾ ಜಿಲ್ಲೆಯ ಸಾಲ್ಟ್ ವಿಧಾನಸಭಾ ಕ್ಷೇತ್ರದ ಶಾಸಕರಾದ ಸುರೇಂದ್ರ ಸಿಂಗ್ ಜೀನಾ ಅವರು ಗುರುವಾರ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ಮೂಲಗಳ ಪ್ರಕಾರ ಕಳೆದ 15 ದಿನಗಳ ಹಿಂದೆ ಸುರೇಂದ್ರ ಸಿಂಗ್ ಅವರಿಗೆ ಕೋವಿಡ್ ಸೋಂಕು ದೃಢಪಟ್ಟಿತ್ತು. ದೆಹಲಿಯ ಗಂಗಾರಾಮ್ ಆಸ್ಪತ್ರೆಗೆ ದಾಖಲಾಗಿ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಗುರುವಾರ ಬೆಳಗ್ಗೆ ಸುರೇಂದ್ರ ಸಿಂಗ್ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.
ಕಳೆದ ಕೆಲ ದಿನಗಳ ಹಿಂದಷ್ಟೆ ಇವರ ಪತ್ನಿ ಕೂಡ ಹೃದಯಾಘಾತದಿಂದ ಮೃತಪಟ್ಟಿದ್ದರು ಎಂದು ಹೇಳಲಾಗಿದೆ.