ದೇಶ

ಕಾಂಗ್ರೆಸ್ ಹಿರಿಯ ನಾಯಕ ಅಹ್ಮದ್ ಪಟೇಲ್ ನಿಧನ: ಪ್ರಧಾನಿ ಮೋದಿ ಸಂತಾಪ

Manjula VN

ನವದೆಹಲಿ: ಕಾಂಗ್ರೆಸ್ ಹಿರಿಯ ನಾಯಕ ಅಹ್ಮದ್ ಪಟೇಲ್ ಅವರು ವಿಧಿವಶರಾಗಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಗಣ್ಯರು ಸಂತಾಪ ಸೂಚಿಸಿದ್ದಾರೆ. 

ದೆಹಲಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅಹ್ಮದ್ ಪಟೇಲ್ ಅವರು ಇಂದು ಬೆಳಗಿನ ಜಾವ 3.30ರ ಸುಮಾರಿಗೆ ನಿಧನ ಹೊಂದಿದ್ದಾರೆ. ಸೋನಿಯಾ ಗಾಂಧಿ ಆಪ್ತರಲ್ಲಿ ಅಹ್ಮದ್ ಪಟೇಲ್ ಅವರೂ ಕೂಡ ಒಬ್ಬರಾಗಿದ್ದರು. 

ಅಹ್ಮದ್ ಪಟೇಲ್ ಅವರ ನಿಧನ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರು, ಅಹ್ಮದ್ ಪಟೇಲ್ ಅವರು ಸಾವಿನ ಸುದ್ದಿ ಆಘಾತವನ್ನುಂಟು ಮಾಡಿದೆ. ತಮ್ಮ ಬಹುತೇಕ ಜೀವನವನ್ನು ಸಮಾಜ ಸೇವೆಗೆ ಮುಡಿಪಾಗಿಟ್ಟಿದ್ದರು. ಕಾಂಗ್ರೆಸ್ ಪಕ್ಷ ಕಟ್ಟುವಲ್ಲಿ ಅಹ್ಮದ್ ಪಟೇಲ್ ಅವರ ಪಾತ್ರ ಪ್ರಮುಖವಾದದ್ದು. ತಮ್ಮ ಅಗಾಧ ನೆನಪಿನ ಶಕ್ತಿಗೆ ಪಟೇಲರು ಹೆಸರುವಾಸಿಯಾಗಿದ್ದರು. ಪೇಟಲ್ ಅವರ ಪುತ್ರ ಫೈಸರ್ ಜೊತೆ ಮಾತನಾಡಿ, ಸಂತಾಪ ಸೂಚಿಸಿದ್ದಾರೆ. ಅಹ್ಮದ್ ಪಟೇಲ್ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಹೇಳಿದ್ದಾರೆ. 

ಸಿಎಂ ಯಡಿಯೂರಪ್ಪ ಸಂತಾಪ

ಮುಖ್ಯಮಂತ್ರಿ ಯಡಿಯೂರಪ್ಪ ಅವರೂ ಕೂಡ ಅಹ್ಮದ್ ಪಟೇಲ್ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಅಹ್ಮದ್ ಪಟೇಲ್ ಅವರ ಅಗಲಿಕೆ ಸಾಕಷ್ಟು ನೋವು ತಂದಿದೆ. ಅವರ ಕುಟುಂಬಕ್ಕೆ, ಬೆಂಬಲಿಗರಿಗೆ ಸಂತಾಪ ಸೂಚಿಸುತ್ತೇನೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಓಂ ಶಾಂತಿ ಎಂದು ಹೇಳಿದ್ದಾರೆ. 

SCROLL FOR NEXT